ಜನರ ಬಳಿಗೆ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಿ: ಎಂ.ಬಿ.ಪಾಟೀಲ
Officials should reach out to the people and resolve their issues: M.B. Patil
ದೇವರಹಿಪ್ಪರಗಿ 19: ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದರ ಜೊತೆಗೆ, ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳೀಯ ಮಟ್ಟದಲ್ಲೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆರಂಭಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ನೀಡಿದರು. ಪಟ್ಟಣದ ವಿಜಯಪುರ ರಸ್ತೆಯ ಬಳಿಯ ನೂತನ ಪ್ರಜಾಸೌಧ ಕಟ್ಟಡಕ್ಕಾಗಿ ಕಾಯ್ದಿರಿಸಿದ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜನರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹುಡುಕಿಕೊಂಡು ಹೋಗುವ ಬದಲು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದು ಆಂದೋಲನದ ಉದ್ದೇಶವಾಗಿದೆ. ತಾಲೂಕು ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಾರದಲ್ಲಿ ಒಂದು ದಿನ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಆಲಗೂರ ಗ್ರಾಮದಲ್ಲಿ ವಿದ್ಯುತ್ ದೀಪ ಅಳವಡಿಕೆ, ತಾಂಡಾದ ಕಂಪ್ಯೂಟರ್ ಉತಾರಿ ಸಮಸ್ಯೆ, ವಾರ್ಡ್ ನಂ.10ರ ಚರಂಡಿ ವ್ಯವಸ್ಥೆ, ಸಾತಿಹಾಳದಲ್ಲಿ ಸ್ಮಶಾನ ಭೂಮಿ, ಹೊಲಕ್ಕೆ ದಾರಿ, ಎಎನ್‌ಎಂ ಕಟ್ಟಡ, ಹೈಮಾಸ್ಕ್, ನಿವೇಶನ, ಮನೆ, ಶೌಚಾಲಯ, ಕುಡಿಯುವ ನೀರು, ಬೆಳೆ ವಿಮೆ ಹಾಗೂ ಬಸ್ ವ್ಯವಸ್ಥೆ ಸೇರಿದಂತೆ ಹಲವು ಸಮಸ್ಯೆಗಳನ್ನು ಸಚಿವರು ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಮಾತನಾಡಿ, ಶಾಸಕಾಂಗದ ಜತೆಗೆ ಕಾರ್ಯಾಂಗವೂ ಕೈಜೋಡಿಸಿದಾಗ ಮಾತ್ರ ಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ದೊರೆಯಲಿದೆ. ಅಧಿಕಾರಿಗಳು ಬಡವರು ಹಾಗೂ ಜನಸಾಮಾನ್ಯರ ಪರವಾಗಿ ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ. ಆನಂದ ಮಾತನಾಡಿ, ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ತಹಶೀಲ್ದಾರ್ ನಿಂಗಣ್ಣ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 