ಆಪರೇಷನ್ ಕಮಲ; ಮೈಸೂರಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮೈಸೂರು, ನ 4:   ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವುದು ಬಹಿರಂಗವಾಗಿರುವುದರಿಂದ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಬಿಜೆಪಿ ಸರ್ಕಾರ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್, ನಗರದ ಗಾಂಧಿವೃತ್ತದಲ್ಲಿ  ಪ್ರತಿಭಟನೆ ನಡೆಸಿತು. 

ಮೈಸೂರು ಜಿಲ್ಲಾ ಹಾಗೂ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. 

ಮೈತ್ರಿ ಸರ್ಕಾರ ಬೀಳಿಸುವಲ್ಲಿ ಬಿಜೆಪಿಯ ಕುತಂತ್ರ ನೀತಿ ಬಯಲಾಗಿದ್ದು, ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ ಎಂದು ಸಮಿತಿ ಆರೋಪಿಸಿದೆ.  

ಬಹಿರಂಗಗೊಂಡ ಆಡಿಯೋದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮುಖ್ಯಪಾತ್ರ ವಹಿಸಿರುವುದು ಬಹಿರಂಗಗೊಂಡಿದೆ.  

ಹೀಗಾಗಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ  ಶಾಸಕ ತನ್ವೀರ್ ಸೇಠ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ನಗರಾಧ್ಯಕ್ಷ ಆರ್.ಮೂತರ್ಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಪುಷ್ಪಲತಾ ಅಮರನಾಥ್ ಸೇರಿ ಹಲವರು ಭಾಗಿಯಾಗಿದ್ದರು.