ಶಿಮ್ಲಾ, ನ 7: ಅಧೋಗತಿಗೆ ಇಳಿಯುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಸರಿಪಡಿಸುವ ಮತ್ತು ಹಳಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಫಲವಾಗಿ ಧರ್ಮಶಾಲಾದಲ್ಲಿ ಗುರುವಾರ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಜಾಗತಿಕ ಸಮ್ಮೇಳನದಲ್ಲಿ ಹದಿನಾರು ರಾಷ್ಟ್ರಗಳ 209 ಕ್ಕೂ ಹೆಚ್ಚು ವಿದೇಶಿ ಪ್ರತಿನಿಧಿಗಳು, ಉದ್ಯಮಿಗಳು, ಬಂಡವಾಳ ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಾಳೆ ಸಮಾರೋಪ ಸಮಾರಂಭವನ್ನುದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚು ಮಾಡುವುದು, ಉತ್ಪಾದನಾ ವಲಯವನ್ನು ಮತ್ತಷ್ಟು ಬಲಪಡಿಸುವ ಸದುದ್ದೇಶದಿಂದ ಬಂಡವಾಳ ಹೂಡಿಕಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಎರಡು ದಿನಗಳ ಸಮಾವೇಶದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ.