ಬೆಂಗಳೂರು, ಫೆ.17, ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳನ್ನು ಪೊಲೀಸರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ಏಕೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಂದ ವರದಿ ಕೇಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಬಾಂಡ್ ಮೇಲೆ ಬಿಡುಗಡೆ ಮಾಡಿದ್ದ ಬಗ್ಗೆ ವರದಿ ಕೇಳಿದ್ದೇವೆ. ಈಗಾಗಲೆ ಆ ವಿದ್ಯಾರ್ಥಿಗಳನ್ನು ಮತ್ತೆ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆ ನಡೆಯಲಿದ್ದು, ಯಾವುದೇ ಕಾರಣಕ್ಕೂ ದೇಶದ್ರೋಹಿಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಕಠಿಣವಾದ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಗೃಹ ಇಲಾಖೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.