ಪಂಚಮಸಾಲಿ ಮೀಸಲಾತಿ ವಿಳಂಬ : 10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ
ಬೆಳಗಾವಿ 26: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದ ಸರಕಾರದ ನಿರ್ಲಕ್ಷ್ಯ ಖಂಡಿಸಿ ಇದೇ ಡಿ.10ರಂದು ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಸ್ವಾಮೀಜಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಮಂಗಳವಾರ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣ ಹಾಗೂ ಉದ್ಯೋಗದ ಸಲುವಾಗಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕಳೆದ ನಾಲ್ಕು ವರ್ಷದಿಂದ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಆದರೆ ಇಲ್ಲಿಯವರೆಗೂ ನಮಗೆ ಮೀಸಲಾತಿ ಸಿಕಿಲ್ಲ. ಈಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ 2.0 ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಎರಡು ಬಾರಿ ಸಭೆ ಕರೆದು ಭರವಸೆ ಕೊಡುವ ಮಾತು ಹೇಳಲಿಲ್ಲ. ಕಳೆದ ಬಾರಿಯ ಸಿಎಂ ಭೇಟಿಯಲ್ಲಿ ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಕೊಡುವುದಕ್ಕೆ ಉಪಚುನಾವಣೆಯ ನೀತಿ ಸಂಹಿತೆ ಇದೆ ಎಂದು ಹೇಳಿ ಜಾರಿಕೊಳ್ಳುವ ಕೆಲಸ ಮಾಡಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲು ನಮ್ಮ ಸಮಾಜದ ಕೊಡುಗೆ ಅಪಾರವಾಗಿದೆ. ನಮ್ಮ ಸರಕಾರದ ಋಣ ತೀರಿಸಬೇಕೆಂದರೆ ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಕೊಡಲೇಬೇಕು ಎಂದರು. ಡಿ.1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಪಂಚಮಸಾಲಿ ಸಮಾಜದ ಮುಖಂಡರ ಜೊತೆಗೆ ಸಭೆ ನಡೆಸಿ ಡಿ.10ರಂದು ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಟ್ರ್ಯಕ್ಟರ್ ಹೋರಾಟದ ಜೊತೆಗೆ ಮುತ್ತಿಗೆ ಹಾಕಲು ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಇದೇ ವೇಳೆ ಆರ್.ಸಿ.ಪಾಟೀಲ್ ಮಾತನಾಡಿ, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪಡೆಯಲು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಡಿ.10ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪಡೆಯಬೇಕೆಂದು ರಾಜ್ಯದ 10 ಸಾವಿರ ಪಂಚಮಸಾಲಿ ವಕೀಲರು ಕಾನೂನು ರೀತಿಯಲ್ಲಿ ಹೋರಾಟ ನಡೆಸಲು ಸಹಕಾರ ನೀಡಲಾಗುವುದು ಎಂದರು.
ನಿಂಗಪ್ಪ ಪಿರೋಜಿ ಮಾತನಾಡಿ, ಕಳೆದ ನಾಲ್ಕು ವರ್ಷದಿಂದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಡ ಮಾಡಿಕೊಂಡು ಬಂದಿದ್ದೇವೆ. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಮ್ಮ ಸಮಾಜದ ರಾಜಕೀಯ ವ್ಯಕ್ತಿಗಳು ಒಗ್ಗಟಾಗಿ ಹೋರಾಟ ಮಾಡಬೇಕು. ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಹೋರಾಟ ನಡೆಸಲಾಗುತ್ತದೆ ಎಂದರು.
ಮಾಜಿ ಸಚಿವ ಶಶಿಕಾಂತ ನಾಯಕ, ಎ.ಬಿ.ಪಾಟೀಲ್, ಪಂಚಮಸಾಲಿ ಮುಖಂಡರಾದ ಅಶೋಕ ಹರಗಾಪುರೆ, ಸುಧಾಕರ ಪಾಟೀಲ್, ಗುಂಡು ಪಾಟೀಲ್, ಧರೆಪ್ಪ ಟಕ್ಕಣ್ಣವರ, ಪೂಜಾ ಸವದತ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.