ನವದೆಹಲಿ, ಮೇ 7, ಆಂಧ್ರಪ್ರದೇಶದ ವಿಶಾಖಪಟ್ಟಣಂನ ರಾಸಾಯನಿಕ ಸ್ಥಾವರದಲ್ಲಿ ಅನಿಲ ಸೋರಿಕೆ ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವಾಲಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಚರ್ಚಿಸಿದ್ದಾರೆ.ಘಟನೆಯಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಬಹುತೇಕ ಮಕ್ಕಳು ಸೇರಿದಂತೆ ಹತ್ತಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಗುರುವಾರ ಬೆಳಗಿನ ಜಾವ ವೈಜಾಗ್ ನ ಎಲ್‍ಜಿ ಪಾಲಿಮರ್ಸ್ ಇಂಡಿಯಾ ಸಂಸ್ಥೆಯ ರಾಸಾಯನಿಕ ಸ್ಥಾವರಲ್ಲಿ ವಿಷಾನಿಲ ಸೋರಿಕೆಯಾಗಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ‘ವಿಶಾಖಪಟ್ಟಣಂನಲ್ಲಿನ ಪರಿಸ್ಥಿತಿ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇಡಲಾಗಿದೆ.’ ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ. ‘ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತಿದ್ದೇನೆ. ವಿಶಾಖಪಟ್ಟಣಂನಲ್ಲಿನ ಎಲ್ಲರ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.’ ಎಂದು ಮೋದಿ ಹೇಳಿದ್ದಾರೆ.