ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳು ಭಾಗವಹಿಸಬೇಕು: ಬಸವರಾಜ ಬೊಮ್ಮಾಯಿ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳು ಭಾಗವಹಿಸಬೇಕು: ಬಸವರಾಜ ಬೊಮ್ಮಾಯಿ  Political parties must participate in the revision of the voters' list: Basavaraj Bommai

ಶಿಗ್ಗಾಂವಿ 5: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿದ್ದು, ಈ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳು ಸಕ್ರಿಯವಾಗಿ ಭಾಗವಹಿಸಿ ಮೇಲ್ವಿಚಾರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.  

ಪಟ್ಟಣದ ತಮ್ಮ ನಿವಾಸದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯ ಉದ್ದೇಶ ಅನರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದು ಹಾಗೂ 18 ವರ್ಷ ಪೂರೈಸಿದ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಗೆ ಸೇರೆ​‍್ಡ ಮಾಡುವುದು ಎಂದು ತಿಳಿಸಿದರು.  

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಕೇಂದ್ರ ಚುನಾವಣಾ ಆಯೋಗದ ನೇತೃತ್ವದಲ್ಲಿ ನಡೆಯುತ್ತಿದ್ದು, ರಾಜ್ಯ ಅಥವಾ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜಕೀಯ ಪಕ್ಷದ ಹಸ್ತಕ್ಷೇಪವಿಲ್ಲದೆ ನಿಷ್ಪಕ್ಷಪಾತವಾಗಿ ನಡೆಯುತ್ತದೆ ಎಂದು ಅವರು ಹೇಳಿದರು.  

ಬಿಎಲ್‌ಎ-1 ಮತ್ತು ಬಿಎಲ್‌ಎ-2 ಪ್ರತಿನಿಧಿಗಳಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಬಿಎಲ್‌ಎ-1 ಪ್ರತಿನಿಧಿಗಳು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಸಭೆಗಳಲ್ಲಿ ಭಾಗವಹಿಸಿ ಅಗತ್ಯ ಸಲಹೆ-ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಿಎಲ್‌ಎ-2 ಪ್ರತಿನಿಧಿಗಳು ಪ್ರತಿಯೊಂದು ಮತಗಟ್ಟೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅರ್ಜಿ ವಿತರಣೆ, ಅರ್ಜಿ ಭರ್ತಿ ಹಾಗೂ ಪರೀಶೀಲನಾ ಕಾರ್ಯದಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.  

ಪ್ರತಿಯೊಂದು ಮತಗಟ್ಟೆಯಲ್ಲೂ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.  

ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ, ಶಿವಪುತ್ರ​‍್ಪ ಕಲಕೋಟಿ, ಶಿವಾನಂದ ಮಾಯಗೇರಿ, ಗಂಗಾಧರ ಸಾತಣ್ಣವರ, ಡಾ. ಶೋಭಾ ನಿಸ್ಸಿಮಗೌಡ್ರ, ಮಲ್ಲೇಶಪ್ಪ ಹರಿಜನ, ಬಿಎಲ್‌ಒಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.