ವಸತಿ ನಿಲಯಗಳ ನಿರ್ಮಾಣಕ್ಕೆ ಕೇಂದ್ರದ ನೆರವು ಸಾಧ್ಯತೆ

ಬೆಂಗಳೂರು, ನ, 11 :     ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ವಸತಿ ನಿಲಗಳನ್ನು ತೆರೆಯಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.  ಸಮಾಜ ಕಲ್ಯಾಣ, ಲೋಕೋಪಯೋಗಿ ಇಲಾಖೆ ಜವಾಬ್ದಾರಿ ಹೊಂದಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಕೇಂದ್ರದ ನೆರವು ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮೂಲಗಳು ತಿಳಿಸಿವೆ.  ರಾಜ್ಯದಲ್ಲಿ ವಿದ್ಯಾರ್ಥಿ ನಿಲಯಗಳ ಕೊರತೆಯಿದೆ. ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ಗಳ ಕೊರತೆಯಿದ್ದು, ಕನಿಷ್ಠ ನೂರು ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲು ನೆರವು ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ವಸತಿ ನಿಲಯಗಳ ನಿರ್ಮಾಣಕ್ಕೆ ಜಾಗ ಲಭ್ಯವಿರುವ ಸ್ಥಳಗಳನ್ನು ಗುರುತಿಸಲಾಗಿದ್ದು, ಇನ್ನೂ ಕೆಲವೆಡೆ ಭೂಮಿ ಗುರುತಿಸಲಾಗುತ್ತಿದೆ. ಭೂಮಿ ಲಭ್ಯವಿರುವ ಸ್ಥಳಗಳಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುತ್ತೇವೆ. ನಂತರ ಮುಂದಿನ ದಿನಗಳಲ್ಲಿ ಅಗತ್ಯವಿರುವ ಕಡೆ ಜಾಗ ಗುರುತಿಸಿದ ನಂತರ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಸಚಿವ ಗೋವಿಂದ ಕಾರಜೋಳ್ ಕೇಂದ್ರ ಸಚಿವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.