ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ : ಶಾಸಕ ಐಹೊಳೆ

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ : ಶಾಸಕ ಐಹೊಳೆ Precautionary measures to prevent drinking water problems in rural areas: MLA Aihole

ಚಿಕ್ಕೋಡಿ 12:  ಬೇಸಿಗೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಯಬಾಗ ಮತಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.ತಾಲೂಕಿನ ಕಬ್ಬೂರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕುಡಿಯುವ ನೀರಿನ ತೊಂದರೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ನೀರಿನ ಸಮಸ್ಯೆ ಕಾಣಿಸಿಕೊಂಡ ಗ್ರಾಮಗಳಿಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.ಬೇಸಿಗೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ನಿರಂತರ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.ಕಬ್ಬೂರ ಪಟ್ಟಣದಲ್ಲಿ ಕೈಗೆತ್ತಿಕೊಂಡಿರುವ ಸ್ಮಶಾನ ಕಾಂಪೌಂಡ್ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 70 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.ಗ್ರಾಮಗಳ ಅಭಿವೃದ್ಧಿಗೆ ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜನಸಾಮಾನ್ಯರ ಅನುಕೂಲಕ್ಕಾಗಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಸುರೇಶ ಬೆಲ್ಲದ, ಮಹಾನಿಂಗ ಹಂಜಿ, ಮಹಾದೇವ ಜಿವಣಿ, ಬಾಳೇಶ ಕುಕನೂರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.