ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಜನತಾ ದರ್ಶನ ಕಾರ್ಯಕ್ರಮದ
ಪೂರ್ವಭಾವಿ ಸಭೆ
ಗದಗ 16: ಬರುವ ಏಪ್ರಿಲ್ 19 ರಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಮುಳಗುಂದ ಪಟ್ಟಣದ ಎಸ್.ಜೆ.ಜೆ.ಎಂ. ಪ್ರೌಢಶಾಲೆಯ ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಜನತಾ ದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್ 19 ರಂದು ಜರುಗಲಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರಿಂದ ಸ್ವೀಕೃತವಾಗುವ ಆಯಾ ಇಲಾಖೆಯ ಮನವಿಗಳ ಬಗ್ಗೆ ಮಾನ್ಯ ಸಚಿವರ ಸಮಕ್ಷಮದಲ್ಲಿ ಮನವಿಯ ಬಗ್ಗೆ ವಿವರಣೆಯನ್ನು ನೀಡಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.