ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ

ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ Preliminary meeting on the district level Janata Darshan program

ಗದಗ 26: ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಸಿದ್ಧತಾ ಸಭೆಯು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ  ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಜನತಾ ದರ್ಶನ  ಕಾರ್ಯಕ್ರಮವನ್ನು ಸಮರ​‍್ಕವಾಗಿ, ಶಿಸ್ತಿನೊಂದಿಗೆ ಆಯೋಜಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀಧರ್  ಅವರು, ಜನತಾ ದರ್ಶನವು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಮಹತ್ವದ ವೇದಿಕೆ ಆಗಿದ್ದು, ಯಾವುದೇ ತೊಂದರೆ ಉಂಟಾಗದಂತೆ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅರ್ಜಿದಾರರಿಗೂ ಸರಿಯಾದ ಮಾರ್ಗದರ್ಶನ ನೀಡಬೇಕು ಹಾಗೂ ಅವರ ಅರ್ಜಿಗಳನ್ನು ತಕ್ಷಣ ದಾಖಲಿಸಿ ಸಂಬಂಧಿಸಿದ ಇಲಾಖೆಗೆ ರವಾನಿಸುವ ವ್ಯವಸ್ಥೆ ಇರಬೇಕು ಎಂದರು. ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬಾಕಿ ಅರ್ಜಿಗಳ ವಿವರಗಳನ್ನು ಪೂರ್ವಭಾವಿಯಾಗಿ ಪರೀಶೀಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ನೀಡುವ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಪಾರದರ್ಶಕವಾಗಿದ್ದು, ಸಮಯಬದ್ಧವಾಗಿ ಪೂರ್ಣಗೊಳ್ಳಬೇಕು ಎಂದು ಹೇಳಿದರು. 

ಜನತಾದರ್ಶನ ಕಾರ್ಯಕ್ರಮವು ಜನರಲ್ಲಿ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಿಸುವ ಪ್ರಮುಖ ಅವಕಾಶವಾಗಿರುವುದರಿಂದ, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಫೆಬ್ರುವರಿ 27 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್‌.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿ ಸಮರ​‍್ಕವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ತಿಳಿಸಿದರು.      

ಸಭೆಯಲ್ಲಿ ಜನತಾ ದರ್ಶನ  ಕುರಿತು ವಿವಿಧ ಇಲಾಖೆಗಳಿಂದ ಸ್ವೀಕೃತವಾದ ಅರ್ಜಿಗಳ ವಿವರ, ಕೈಗೊಂಡ ಕ್ರಮಗಳ ಕುರಿತು  ಚರ್ಚೆ ನಡೆಸಲಾಯಿತು.  ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್‌., ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್‌.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ,  ತಹಶೀಲ್ದಾರರುಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.