ಲೋಕದರ್ಶನ ವರದಿ
ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕುರಿತು ಪೂರ್ವಭಾವಿ ಸಭೆ ಜಯಂತಿ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
ಗದಗ 25 : ಏಪ್ರಿಲ್ 5 ರಂದು ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 118 ನೇ ಹಾಗೂ ಏಪ್ರಿಲ್ 14 ರಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ನ್ನು ಆಚರಿಸಲಾಗುತ್ತಿದ್ದು ಜಯಂತಿಯನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತ ಆಚರಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಮಂಗಳವಾರ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏಪ್ರಿಲ್ 5 ರಂದು ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ಆಡಿಟೋರಿಯಂ ಹಾಲ್‌ದಲ್ಲಿ ಆಚರಿಸಲಾಗುವುದು. ಏಪ್ರಿಲ್ 14 ರಂದು ಜಿಲ್ಲಾಡಳಿತದಿಂದ ವಿವಿಧ ಸಂಘಟನೆಗಳೊಂದಿಗೆ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲು ಕ್ರಮ ವಹಿಸಬೇಕು. ಕಾರ್ಯಕ್ರಮಕ್ಕೂ ಮುನ್ನ ಕಲಾ ತಂಡಗಳೊಂದಿಗೆ ವ್ಯವಸ್ಥಿತ ಮೆರವಣಿಗೆ ಜರುಗಬೇಕು. ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸಕರ ಆಯ್ಕೆ , ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ, ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ಲಕ್ಸ್ ಬೋರ್ಡ ಅಳವಡಿಕೆ, ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮಹಿಳಾ ಸಂಘಟನೆಗಳು , ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಹಾಗೂ ಸಮುದಾಯಗಳ ಪಾಲ್ಗೊಳ್ಳುವಿಕೆ, ಮಕ್ಕಳಿಗೆ ವಿವಿಧ ವೇಷ ಭೂಷಣ ಕಾರ್ಯಕ್ರಮ ಆಯೋಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ನಗರದ ವಿವಿಧ ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆ, ಎನ್.ಜಿ.ಓ, ಎನ್.ಎಸ್.ಎಸ್., ಎನ್.ಸಿಸಿ ಸಂಘಟನೆಗಳ ಭಾಗವಹಿಸುವಿಕೆ, ರೈತರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನರು ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜನೆ, ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ಮಾಜಿ ಸೈನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಈ ಕುರಿತು ವಿವಿಧ ಸಂಘಟನೆಗಳು ಸಮುದಾಯಗಳ ಮುಖಂಡರುಗಳು ತಮ್ಮ ಸಲಹೆ ಸೂಚನೆಗಳನ್ನು ಸಭೆಯ ಗಮನಕ್ಕೆ ತಂದರು. .
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸರ್ವರನ್ನು ಸ್ವಾಗತಿಸಿ ವಂದಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ವಿವಿಧ ಇಲಾಖೆ ಅಧಿಕಾರಿಗಳು, ಸಂಸ್ಥ ಸಂಸ್ಥೆಗಳ, ಸಮುದಾಯದ ಮುಖ್ಯಸ್ಥರು, ಗಣ್ಯರು , ಹಿರಿಯರು ಹಾಜರಿದ್ದರು.