ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ 30: ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ ಶುಭಾಶಗಳ ಮಹಾಪೂರವೇ ಹರಿದುಬರುತ್ತಿದೆ.

ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ನಾಲ್ಕು ಓವರ್ ಗಳು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಅಂತಿಮವಾಗಿ ಭಾರತ 7 ರನ್ ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ. ಇದು ಟೀಂ ಇಂಡಿಯಾದ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಆಗಿದೆ. ಇನ್ನು 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಮೊದಲ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿತ್ತು.

ಇನ್ನು ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಆಟಗಾರರಿಗೆ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತಂದಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನ ದೊಡ್ಡ ವಿಜಯವಾಗಿದೆ. ಭಾರತೀಯ ಆಟಗಾರರು ವಿಶ್ವಕಪ್ ಟ್ರೋಫಿ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದಾರೆ. ಒಂದೇ ಒಂದು ಪಂದ್ಯವನ್ನು ಸೋಲದೆ ಈ ದಿಗ್ವಿಜಯವನ್ನು ಸಾಧಿಸಿದ್ದೀರಿ ಎಂದು ಹೇಳಿದ್ದಾರೆ.

ಇದೇ ವೇಳೆ ಟೀಂ ಇಂಡಿಯಾಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೇಶದ ಎಲ್ಲ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.