ನವದೆಹಲಿ, ಸೆ 16 ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜಮ್ಮುಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
ರಾಜ್ಯದ ಅಭಿವೃದ್ಧಿ ವಿಷಯಗಳ ಬಗ್ಗೆ ಮಲಿಕ್ ಅವರು ಪ್ರಧಾನಿಯೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೇಂದ್ರದ ಪ್ರಯತ್ನಗಳ ಬಗ್ಗೆ ಮಾತನಾಡಿದ್ದ ಮಲಿಕ್, ಸರ್ಕಾರ ನಿಮಗಾಗಿ ಇದೆ. ಗೃಹ ಸಚಿವರು ಸರಪಂಚ್ಗಳೊಂದಿಗೆ ಕುಳಿತು 'ನಿಮಗೆ ಏನು ಬೇಕು ಎಂದು ಕೇಳಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ? ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಸರಪಂಚ್ಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ರಾಜ್ಯಕ್ಕೆ ಏನು ಮಾಡಬೇಕು ಎಂದು ಅವರೊಂದಿಗೆ ಕೇಳುತ್ತಿದ್ದಾರೆ ಎಂದು ಮಲಿಕ್ ಹೇಳಿದ್ದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ಬಳಿಕ ಅಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಅದನ್ನು ತಹಬದಿಗೆ ತರಲು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಈ ಸಂದರ್ಭದಲ್ಲಿ ರಾಜ್ಯಪಾಲ ಮಲಿಕ್ ಅವರು ಪ್ರಧಾನಿ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.