ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಆದ್ಯತೆ: ಪಿಒಪಿ ಮೂರ್ತಿ, ಡಿಜೆ ಬಳಕೆಗೆ ಕಟ್ಟುನಿಟ್ಟಿನ ನಿಷೇಧ

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಆದ್ಯತೆ: ಪಿಒಪಿ ಮೂರ್ತಿ, ಡಿಜೆ ಬಳಕೆಗೆ ಕಟ್ಟುನಿಟ್ಟಿನ ನಿಷೇಧ  Priority for eco-friendly Ganeshotsav: Strict ban on POP idols and DJ usage

ಲೋಕದರ್ಶನ ವರದಿ 

  ಕಾರವಾರ 08 :  ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿಯುತ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪಿಒಪಿಯಿಂದ ತಯಾರಿಸಿದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಡಿಜೆ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಮೂರ್ತಿಗಳನ್ನು ಬಳಸದೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು. ಪ್ಲಾಸ್ಟಿಕ್ ರಹಿತ ಅಲಂಕಾರಿಕ ವಸ್ತುಗಳನ್ನು ಬಳಸಬೇಕು.

ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆಯ ಅನುಮತಿ ಕಡ್ಡಾಯವಾಗಿದ್ದು, ಡಿಜೆ ಬಳಸಲು ಅವಕಾಶವಿಲ್ಲ. ವಸತಿ ಪ್ರದೇಶಗಳಲ್ಲಿ 55 ಡೆಸಿಬಲ್ ಹಾಗೂ ಶಾಲೆ, ಆಸ್ಪತ್ರೆಗಳಂತಹ ಸೂಕ್ಷ್ಮ ವಲಯಗಳಲ್ಲಿ ಗರಿಷ್ಠ 50 ಡೆಸಿಬಲ್ ಶಬ್ದಮಿತಿಯನ್ನು ಪಾಲಿಸಬೇಕು.  ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂದು ಅವರು ಹೇಳಿದರು. ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಏಕಗವಾಕ್ಷಿ’ ವ್ಯವಸ್ಥೆ ಕಲ್ಪಿಸಲಾಗಿದೆ. ಅಗತ್ಯ ಇಲಾಖೆಗಳ ನಿರಾಪೇಕ್ಷಣಾ ಪತ್ರಗಳನ್ನು ಅಲ್ಲಿಯೇ ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಸೂಕ್ತ ಸ್ಥಳೀಯ ಅನುಮತಿ ಪಡೆದು ಮೆರವಣಿಗೆ ನಡೆಸುವಂತೆ ಸೂಚಿಸಲಾಗಿದೆ. ಮೂರ್ತಿ ವಿಸರ್ಜನೆ ಸ್ಥಳಗಳಲ್ಲಿ ಜೆಸಿಬಿ, ಅಗ್ನಿಶಾಮಕ ದಳ, ಹೆಸ್ಕಾಂ ಸಿಬ್ಬಂದಿ ಹಾಗೂ ಪರಿಣಿತ ಈಜುಗಾರರನ್ನು ನಿಯೋಜಿಸಲಾಗುವುದು. ಜಿಲ್ಲೆಯ 50ಕ್ಕೂ ಹೆಚ್ಚು ಅಧಿಕೃತ ಸ್ಥಳಗಳಲ್ಲಿ ಪಟಾಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಖರೀದಿಸುವಂತೆ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್‌. ಮಾತನಾಡಿ, ಹಬ್ಬದ ಸಂದರ್ಭದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್‌ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯ ಸ್ಥಳಗಳಲ್ಲಿ 400 ಗೃಹರಕ್ಷಕರು, 15 ಡಿಎಆರ್ ಹಾಗೂ ಕೆಎಸ್‌ಆರ​‍್ಿ ತುಕಡಿಗಳನ್ನು ನಿಯೋಜಿಸಲಾಗುವುದು ಎಂದರು.