ರೈತರಿಗೆ ಯೋಜನೆ ಮಾಹಿತಿ, ಕುಡಿಯುವ ನೀರು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ

ರೈತರಿಗೆ ಯೋಜನೆ ಮಾಹಿತಿ, ಕುಡಿಯುವ ನೀರು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ  Priority for providing information on schemes to farmers, and for drinking water and development wor

ಲೋಕದರ್ಶನ ವರದಿ 

ಧಾರವಾಡ 5: ರೈತರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಿಸುವುದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಕ್ಕರೆ ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.  ಕಲಘಟಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ನೇರವಾಗಿ ಸೌಲಭ್ಯ ತಲುಪಿಸಬೇಕು ಎಂದು ಹೇಳಿದರು.  

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ  

ಮಳೆ ಕೊರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕಿನ ಸುಮಾರು 16 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಿದ್ದು, 11 ಗ್ರಾಮಗಳಲ್ಲಿ ಬೋರ್ವೆಲ್ ಕೊರೆಸಲಾಗಿದೆ. 8 ಬೋರ್ವೆಲ್ಗಳಿಂದ ನೀರು ಪೂರೈಸಲಾಗುತ್ತಿದೆ. ಉಳಿದ ಗ್ರಾಮಗಳಿಗೂ ಶೀಘ್ರ ನೀರು ಒದಗಿಸುವಂತೆ ಸೂಚಿಸಿದರು.  

ಕಲಘಟಗಿ ಪಟ್ಟಣಕ್ಕೆ ಬೆಣ್ಣೆಹಳ್ಳದಿಂದ ನೀರು ಪೂರೈಸಲಾಗುತ್ತಿದ್ದು, ಪೈಪ್ಲೈನ್ ಸೋರಿಕೆ ದೂರುಗಳನ್ನು ತಕ್ಷಣ ಪರಿಹರಿಸಬೇಕು ಎಂದರು.  ಶಾಲೆ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಆದ್ಯತೆ  

ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಬೇಕು. ದುರಸ್ತಿ ಆಗುವವರೆಗೆ ಅಂತಹ ಕಟ್ಟಡಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬಾರದು ಎಂದು ಸೂಚಿಸಿದರು.  

ಕಲಘಟಗಿ ತಾಲೂಕಿನ 210 ಅಂಗನವಾಡಿ ಕೇಂದ್ರಗಳ ಪೈಕಿ ಈಗಾಗಲೇ 18 ಕೇಂದ್ರಗಳನ್ನು ದುರಸ್ತಿ ಮಾಡಲಾಗಿದ್ದು, ಇನ್ನೂ 11 ಕೇಂದ್ರಗಳ ದುರಸ್ತಿ ಬಾಕಿ ಇದೆ ಎಂದು ತಿಳಿಸಿದರು.  

ತೆರಿಗೆ ವಸೂಲಿಯಲ್ಲಿ ಕಲಘಟಗಿ ತಾಲೂಕಿಗೆ ದ್ವಿತೀಯ ಸ್ಥಾನ  

ತೆರಿಗೆ ವಸೂಲಿಯಲ್ಲಿ ಕಲಘಟಗಿ ತಾಲೂಕು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ. 20 ಗ್ರಾಮ ಪಂಚಾಯಿತಿಗಳು ಶೇ.100ರಷ್ಟು ತೆರಿಗೆ ವಸೂಲಿ ಸಾಧನೆ ಮಾಡಿದ್ದು, 8 ಗ್ರಾಮ ಪಂಚಾಯಿತಿಗಳು ಶೇ.90ಕ್ಕಿಂತ ಹೆಚ್ಚು ಸಾಧನೆ ಮಾಡಿವೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.  ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.