ಬಡಜನರ ಅಭ್ಯುದಯ ಸರ್ಕಾರದ ಆದ್ಯತೆ : ಪ್ರಧಾನಿ

ಮುಂಬೈ, ಅ 13:     ಬಡವರ ಏಳಿಗೆಗೆ ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 

ಮಹಾರಾಷ್ಟ್ರದ ಪೂರ್ವ ವಿದರ್ಭ ಪ್ರಾಂತ್ಯದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,  ರೈತರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಸರ್ಕಾ ರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಕಳೆದ ಕೆಲವು ತಿಂಗಳ ಅವಧಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗಾಗಿ ಮಹಾರಾಷ್ಟ್ರದಲ್ಲಿ 2 ಸಾವಿರ ಕೋಟಿ ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, ಇದರಿಂದ ಲಕ್ಷಾಂತರ ರೈತರಿಗೆ ಪ್ರಯೋಜನವಾಗಿದೆ ಎಂದು ಹೇಳಿದರು. ದೇಶದ ವಿಶೇಷವಾಗಿ ಗುಡ್ಡಗಾಡು ಜನರು ವಾಸ ಮಾಡುವ ಕಡೆ 462 ಏಕಲವ್ಯ ಶಾಲೆಗಳನ್ನು ತೆರೆಯಲಾಗಿದೆ ಎಂದು ಅವರು ಹೇಳಿದರು.   

ಇದಕ್ಕೂ ಮುನ್ನ ಜಲಗಾಂವ್ನಲ್ಲಿ ಮೊದಲ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಬೇಕಾಗಿರುವುದು ಅನಿವಾರ್ಯವಾಗಿತ್ತು. ಇದನ್ನು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಹೇಳಲಾಗಿತ್ತು, ಇದರ ಬಗ್ಗೆ ವಿರೋಧ ಪಕ್ಷಗಳು ಅಪಸ್ವರ ಎತ್ತುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ, ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಅವರು ಮನವಿ ಮಾಡಿದರು.