ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ Protest against electricity privatization

ದೇವರಹಿಪ್ಪರಗಿ 19 : ಸರ್ಕಾರದ ಅಧೀನದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಖಾಸಗಿ ಕಂಪನಿಗಳಿಗೆ, ವಿಶೇಷವಾಗಿ ಟಾಟಾ ಪವರ್‌ಗೆ ವಹಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ, ತಾಲೂಕು ಘಟಕ, ಕನ್ನಡ ಪರ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದ ಮೊಹರೆ ವೃತ್ತದಿಂದ ಬಸ್ ನಿಲ್ದಾಣದ ಮಾರ್ಗವಾಗಿ ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಂತರ  ಹೆಸ್ಕಾಂ ಇಲಾಖೆಯ ಸಹಾಯಕ ಅಭಿಯಂತರಾದ ಸತೀಶ ಸುಲಾಖೆ ಹಾಗೂ ತಹಶೀಲ್ದಾರ್ ನಿಂಗಪ್ಪ ಬಿರಾದಾರ ಅವರ ಮೂಲಕ ಇಂಧನ ಇಲಾಖೆಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಬೆಂಗಳೂರು ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ. ರೈತರು, ಗ್ರಾಮೀಣ ಜನತೆ ಹಾಗೂ ಸಾಮಾನ್ಯ ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರ ವಿದ್ಯುತ್ ಖಾಸಗೀಕರಣದ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.