ರಾಜಸ್ಥಾನ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ರಾಜಸ್ಥಾನ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ Protest condemning the rape of a girl in Rajasthan; demand for strict action against the accused

ಲೋಕದರ್ಶನ ವರದಿ 

 ಸಿಂಧಗಿ, ಜು.16: ರಾಜಸ್ಥಾನದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ, ಸಿಂಧುತಾಯಿ ಒಕ್ಕೂಟ, ಜನವೇದಿಕೆ ನಾಯಕರು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.  

ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿಗೆ ತೆರಳಿ ಉಪ ತಹಶೀಲ್ದಾರ್ ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು. ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಸರ್ಕಾರ ಅತ್ಯುನ್ನತ ಆದ್ಯತೆ ನೀಡಬೇಕು. ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಈ ವೇಳೆ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟದ ಸದಸ್ಯರು ಮಾತನಾಡಿ, ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.  

ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.  

ಈ ಸಂದರ್ಭದಲ್ಲಿ ಮಹಿಳಾ ಸಂಘದ ಸದಸ್ಯರಾದ ಶ್ರೀಮತಿ ನೀಲಮ್ಮ ಯಡ್ರಾಮಿ ಹಾಗೂ ಶ್ರೀಮತಿ ಅಂಬಿಕಾ ಮಾಲಿಬಿರಾದಾರ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅಪರಾಧಿಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದರು.  

ಮಹಿಳೆಯರ ಸುರಕ್ಷತೆ, ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆ ಹಾಗೂ ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದರು.