ಜಿಲ್ಲೆಯಾದ್ಯಂತ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ: ಜಿಲ್ಲಾಧಿಕಾರಿ
Provide neutering treatment to stray dogs across the district: District Collector
ಲೋಕದರ್ಶನ ವರದಿ
ಜಿಲ್ಲೆಯಾದ್ಯಂತ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ: ಜಿಲ್ಲಾಧಿಕಾರಿ
ಕಾರವಾರ 09: ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್, ನಗರಾಭಿವೃಧ್ದಿ ಕೋಶ ಮತ್ತು ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪಶುಪಾಲನಾ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ಮಿಷನ್ ರೇಬಿಸ್ ಕಾರ್ಯಕ್ರಮದಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಯನ್ನು ಕೈಗೊಂಡಿದ್ದು, ಶಿರಸಿಯಲ್ಲಿ 1580 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದ್ದು, ಕಾರವಾರದಲ್ಲಿಯೂ ಈ ಕಾರ್ಯ ಪ್ರಗತಿಯಲ್ಲಿದೆ. ಇದೇ ರೀತಿಯಲ್ಲಿ ಜಿಲ್ಲೆಯ ಉಳಿದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮವನ್ನು ಶೇ.100 ರಷ್ಟು ಅನುಷ್ಠಾನಗೊಳಿಸಬೇಕು ಎಂದ ಜಿಲ್ಲಾಧಿಕಾರಿಗಳು, ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಹ ಈ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಬೀದಿನಾಯಿಗಳ ಕಡಿತಕ್ಕೆ ಸೂಕ್ತ ಚಿಕಿತ್ಸೆ ನೀಡಲು ಓಷಧಗಳ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಓಷಧ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದರು. ಪಶು ಸಂಜೀವಿನಿ ಆಂಬುಲೈನ್ಸ್ ಗಳ ಮೂಲಕ ಪಶುಗಳಿಗೆ ತ್ವರಿತವಾಗಿ ಅಗತ್ಯವಿರುವ ಚಿಕಿತ್ಸೆ ನೀಡುವಂತೆ ಸೂಚಿಸಿದ ಅವರು, ಪಶು ಸಂಜೀವಿನಿ ಆಂಬುಲೈನ್ಸ್ ನ ಉಚಿತ ದೂರವಾಣಿ ಸಂಖ್ಯೆ 1962 ಗೆ ರೈತರು ಮತ್ತು ಜಾನುವಾರು ಮಾಲೀಕರು ಕರೆ ಮಾಡಿದಾಗ ಕೆಲವೊಮ್ಮೆ ಕಾಲ್ ಡ್ರಾಪ್ ಆಗುತ್ತಿರುವ ಕುರಿತು ದೂರುತಿದ್ದು, ಕರೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳು ಕಂಡುಬರದಂತೆ ಮತ್ತು ಕರೆಯಿಂದ ಸ್ವೀಕರಿಸುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಬಗ್ಗೆ ಸೇವಾ ಪೂರೈಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗೆ ಪಶು ಸಂಜೀವಿನಿ ಆಂಬುಲೈನ್ಸ್ ಗಳ ಮೂಲಕ ಸ್ವೀಕರಿಸಿರುವ 7493 ಕರೆಗಳಿಗೆ ಸ್ಪಂದಿಸಿ, ಪಶುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಆಂಬುಲೈನ್ಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲೆಯಲ್ಲಿ ಆಂಬುಲೈನ್ಸ್ ಸೇವೆ ನೀಡುತ್ತಿರುವ ಸಂಸ್ಥೆಯ ಸಂಯೋಜಕರಿಗೆ ಸೂಚನೆ ನೀಡಲಾಗುವುದು ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಮೋಹನ್ ಕುಮಾರ್ ತಿಳಿಸಿದರು. ಕಾಲುಬಾಯಿ ಜ್ವರದ ವಿರುದ್ಧದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳುವಂತೆ ಮತ್ತು ಇದೇ ಅವಧಿಯಲ್ಲಿ ಚರ್ಮಗಂಟು ರೋಗದ ವಿರುದ್ಧ ಲಸಿಕೆಯನ್ನು ಕೂಡಾ ಒಟ್ಟಿಗೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಈಗಾಗಲೇ ನಿರ್ಮಾಣವಾಗಿರುವ ಗೋಶಾಲೆಗಳ ನಿರ್ವಹಣೆ ಮತ್ತು ಬೀಡಾಡಿ ದನಗಳ ನಿಯಂತ್ರಣ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಪೌರಾಯುಕ್ತ ಜಗದೀಶ್ ಹುಲಗೆಜ್ಜಿ ಹಾಗೂ ಪಶುಪಾಲನಾ ಇಲಾಖೆಯ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 