ಎಸ್‌ಐಆರ್ ಕುರಿತು ಜನಜಾಗೃತಿ ಅಗತ್ಯ: ಶಾಸಕ ಸಿ.ಎಸ್‌. ನಾಡಗೌಡ

ಎಸ್‌ಐಆರ್ ಕುರಿತು ಜನಜಾಗೃತಿ ಅಗತ್ಯ: ಶಾಸಕ ಸಿ.ಎಸ್‌. ನಾಡಗೌಡ  Public awareness about SIR is essential: MLA C.S. Nadagouda

ಮುದ್ದೇಬಿಹಾಳ ಜು. 6: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಶಾಸಕ ಸಿ.ಎಸ್‌. ನಾಡಗೌಡ (ಅಪ್ಪಾಜಿ) ಹೇಳಿದರು.  ಪಟ್ಟಣದ ವಿಜಯಮಹಾಂತೇಶ ಮಂಗಳ ಭವನದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರಾಜ್ಯಾದ್ಯಂತ ಜನಜಾಗೃತಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.  ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿದ್ದು, ಮತದಾರರ ಹಕ್ಕುಗಳ ರಕ್ಷಣೆಗೆ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲೂ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.  

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು. ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರೀಶೀಲಿಸುತ್ತಿದ್ದು, ಸಾರ್ವಜನಿಕರು ತಮ್ಮ ಹೆಸರು, ವಿಳಾಸ, ವಯಸ್ಸು ಸೇರಿದಂತೆ ಎಲ್ಲ ಮಾಹಿತಿಯನ್ನು ಪರೀಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.  

ಮತದಾರರ ಪಟ್ಟಿಗೆ ಸಂಬಂಧಿಸಿದ ನಮೂನೆಗಳಲ್ಲಿ ವಿವರಗಳು ಸರಿಯಾಗಿದ್ದರೆ ಸಹಿ ಮಾಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದು. ಹೆಸರು, ವಿಳಾಸ ಅಥವಾ ಇತರೆ ವಿವರಗಳಲ್ಲಿ ತಪ್ಪುಗಳಿದ್ದರೆ ಅಗತ್ಯ ದಾಖಲೆಗಳೊಂದಿಗೆ ತಿದ್ದುಪಡಿ ಮಾಡಿಸಿಕೊಳ್ಳುವಂತೆ ತಿಳಿಸಿದರು.  ಸಭೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.