ಜೂನ್ 28 ರಂದು ಜಿಲ್ಲೆಯಾದ್ಯಂತ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ

ಜೂನ್ 28 ರಂದು ಜಿಲ್ಲೆಯಾದ್ಯಂತ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ Pulse polio vaccination program to be held across the district on June 28: District Collector

ಲೋಕದರ್ಶನ ವರದಿ 

 ಧಾರವಾಡ 22: ಜಿಲ್ಲೆಯಾದ್ಯಂತ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಜೂನ್ 28, 2026 ರಂದು ಹಮ್ಮಿಕೊಳ್ಳಲಾಗಿದ್ದು, 0 ರಿಂದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ನಂತರ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಹೇಳಿದರು. ಅವರು ಇಂದು (ಜೂ.22) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ ಪೋಲಿಯೋ 2026 ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್‌ಪೋಸ್ ಸಮಿತಿ ಸಭೆ ಜರುಗಿಸಿ, ಮಾತನಾಡಿದರು.  

ಪಲ್ಸ್‌ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜೂನ್ 29, 2026 ರಿಂದ ಜೂನ್ 30, 2026 ರವರೆಗೆ ಹಾಗೂ ನಗರ ಪ್ರದೇಶದಲ್ಲಿ ಜೂನ್ 29, 2026 ರಿಂದ ಜುಲೈ 1, 2026 ವರೆಗೆ ಮನೆ ಮನೆ ಭೇಟಿ ಮೂಲಕ ಆರೋಗ್ಯ ಕಾರ್ಯಕರ್ತರು 0-5 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವನ್ನು ಸಮರ​‍್ಕವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು. 

ಜಿಲ್ಲೆಯಲ್ಲಿ 5 ವರ್ಷದೊಳಗಿನ 2,08,779 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, 889 ಲಸಿಕಾ ಕೇಂದ್ರಗಳಿವೆ. 96 ಟ್ರಾಂಜಿಸ್ಟ್‌ ತಂಡಗಳು ಹಾಗೂ 57 ಮೊಬೈಲ್ ತಂಡಗಳನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ 3,862 ವ್ಯಾಕ್ಸಿನೇಟರ​‍್ಸ‌ಗಳು ಮತ್ತು 218 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಕರಪತ್ರ ಹಾಗೂ ಬ್ಯಾನರ್‌ಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಗ್ರಾಮಗಳಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಿದರು.