ವಯನಾಡ್, ಆಗಸ್ಟ್ 27 ಮಳೆಯಿಂದಾಗಿ ಕೇರಳದ ಮೂರು ಜಿಲ್ಲೆಗಳಲ್ಲಿ ಹಾನಿಗೊಳಗಾದ ರಸ್ತೆಗಳ ದುರಸ್ತಿ ಮತ್ತು ಪುನರ್ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ವಯನಾಡ್ ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ವಯನಾಡ್, ಮಲಪ್ಪುರಂ ಮತ್ತು ಕೋಝಿಕ್ಕೋಡ್ ಸೇರಿ ಮೂರು ಜಿಲ್ಲೆಗಳಲ್ಲಿ ಹರಡಿರುವ ತಮ್ಮ ಲೋಕಸಭಾ ಕ್ಷೇತ್ರ ವಯನಾಡ್, ಆಗಸ್ಟ್ 8ರ ಮಳೆ ಮತ್ತು ಪ್ರವಾಹದಿಂದ ಅತಿ ಹೆಚ್ಚು ಹಾನಿಗೊಳಗಾಗಿದೆ ಎಂದು ಸೋಮವಾರ ಗಡ್ಕರಿಗೆ ಬರೆದ ಪತ್ರದಲ್ಲಿ ರಾಹುಲ್ ತಿಳಿಸಿದ್ದಾರೆ. ಕ್ಷೇತ್ರದ ಪ್ರವಾಹಪೀಡಿತ ಪ್ರದೇಶಗಳಲ್ಲಿನ ಹೆಚ್ಚಿನ ರಸ್ತೆಗಳು ಮತ್ತು ಇತರ ಸಂಪರ್ಕಗಳು ಹಾನಿಗೀಡಾಗಿವೆ ಅಥವಾ ಕೊಚ್ಚಿ ಹೋಗಿವೆ ಎಂದು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಪ್ರವಾಹ ಪೀಡಿತ ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಮಂಗಳವಾರ ರಾಹುಲ್ ಗಾಂಧಿ ಭೇಟಿ ನೀಡುವ ಸಾಧ್ಯತೆ ಇದೆ.