ಪತ್ರಕರ್ತರ ಮನೆಗೆ ದಾಳಿ: ಕಠಿಣ ಕ್ರಮಕ್ಕೆ ಆಗ್ರಹ

ಪತ್ರಕರ್ತರ ಮನೆಗೆ ದಾಳಿ: ಕಠಿಣ ಕ್ರಮಕ್ಕೆ ಆಗ್ರಹ Raid on journalists' homes: Demand for stern action

 ವಿಜಯಪುರ, ಆ.27: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ತೆರಳಿ ಧಮ್ಕಿ ಹಾಕಿರುವ ಅಕ್ಕಿ ಕಳ್ಳರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ, ಆಮ್ ಆದ್ಮಿ ಪಕ್ಷ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.  

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಹಳ್ಳಿ, ಪತ್ರಕರ್ತರನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಯಲಾಗುತ್ತದೆ. ಆದರೆ ವಿಜಯಪುರದಲ್ಲಿ ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದಂತಹ ವಾತಾವರಣ ನಿರ್ಮಾಣವಾಗಿರುವುದು ಖಂಡನೀಯ ಎಂದರು.  

ಪತ್ರಕರ್ತರ ಮನೆಗೆ ತೆರಳಿ ಬೆದರಿಕೆ ಹಾಕುವುದು, ಕುಟುಂಬದವರಲ್ಲಿ ಆತಂಕ ಮೂಡಿಸುವುದು ಹಾಗೂ ಭಯದ ವಾತಾವರಣ ಸೃಷ್ಟಿಸುವುದು ಗಂಭೀರ ವಿಚಾರ. ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಸಂಘದ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಪತ್ರಕರ್ತರಿಗೆ ಬೆದರಿಕೆ ಹಾಕುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.  

ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಶರಣು ಮಸಳಿ, ಹಿರಿಯ ವರದಿಗಾರ ಬಸವರಾಜ ಸಂಪಳ್ಳಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಪತ್ರಕರ್ತ ಪರಶುರಾಮ ಶಿವಶರಣ ಅವರ ಕುಟುಂಬಕ್ಕೆ ಬೆದರಿಕೆ ಹಾಕಿದವರನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ಎಎಪಿ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ, ಪತ್ರಕರ್ತ ಪರಶುರಾಮ ಶಿವಶರಣ, ಮೋಹನ ಕುಲಕರ್ಣಿ, ಸಮೀರ ಇನಾಮದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.