ಕೊಪ್ಪಳ: ತಂಬಾಕಿನಿಂದಾಗುವ ದುಷ್ಪರಿಣಾಮಗಳ ಕುರಿತು ಅಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ. ಪಿ. ಮಾರುತಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು (ನ. 31) ಏರ್ಪಡಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲಾ ಕಾಲೇಜುಗಳ ಆವರಣ, ಆಸ್ಪತ್ರೆ, ರೈಲು ನಿಲ್ದಾಣ, ಬಸ್ ನಿಲ್ದಾಣ, ಜಿಲ್ಲಾಡಳಿತ ಭವನ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡುವುದು ಅಪರಾಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳಿಂದ ದೂರ ಇರುವುದರಿಂದ ತಮ್ಮ ಆರೋಗ್ಯವನ್ನು ಸ್ವಸ್ಥವಾಗಿ ಇಟ್ಟುಕೊಳ್ಳಬಹುದು. ತಂಬಾಕು ತ್ಯಜಿಸುವುದರಿಂದ ತಂಬಾಕು ಸೇವನೆಯಿಂದಾಗುವ ರೋಗಗಳನ್ನು ಸುಲಭವಾಗಿ ತಡೆಗಟ್ಟಬಹುದು. ತಂಬಾಕು ಸೇವನೆಯಿಂದಾಗಿ ಪ್ರತಿದಿನ 2500 ಭಾರತೀಯರು ಸಾವಿಗೀಡಾಗುತ್ತಿದ್ದು, ವಿಶ್ವದಲ್ಲಿ ಹತ್ತರಲ್ಲಿ ಒಂದು ಸಾವು ತಂಬಾಕು ಸೇವನೆಯಿಂದಲೇ ಉಂಟಾಗುತ್ತಿದೆ. ಪುರುಷರು ತಂಬಾಕು ಸೇವನೆ ಮಾಡುವುದರಿಂದ ಲೈಂಗಿಕ ಅಶಕ್ತತೆ ಕಂಡು ಬರುತ್ತದೆ. ಮಹಿಳೆಯರಲ್ಲಿ ಗರ್ಭಪಾತ, ಕಡಿಮೆ ತೂಕದ ಮಕ್ಕಳ ಜನನ, ಮಗುವಿನಲ್ಲಿ ಮಾನಸಿಕ ವೈಫಲ್ಯಗಳು, ಕಿವಿಯ ಸೋಂಕು, ಕೆಮ್ಮು ಮತ್ತು ಉಬ್ಬಸ ಸಮಸ್ಯೆಗಳಿಂದ ಬಳಲುವ ಸಾಧ್ಯತೆಗಳಿರುತ್ತವೆ ಎಂದು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದ್ದು, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನೂರು ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವದು ಶಿಕ್ಷಾರ್ಹ ಅಪರಾಧವಾಗಿದೆ. ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿಯನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ವಹಿಸಬೇಕು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿದರ್ಿಷ್ಟ ಆರೋಗ್ಯ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧವಾಗಿದೆ. ತಂಬಾಕನ್ನು ಬಿಟ್ಟುಬಿಡಿ, ಜೀವನವನ್ನು ಆಯ್ಕೆ ಮಾಡಿಕೊಳ್ಳಿ ತಂಬಾಕನ್ನಲ್ಲ. ಎಂಬ ಘೋಷವಾಕ್ಯದಿಂದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ, ಅಬಕಾರಿ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಶಿಕ್ಷಣ ಇಲಾಖೆಯ ಸಿಬ್ಬಂದಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.