ಮಹಿಳೆಯರ ಸೃಜನಶೀಲತೆಗೆ ರಂಗೋಲಿ ಸ್ಪರ್ಧೆ ವೇದಿಕೆ

ಮಹಿಳೆಯರ ಸೃಜನಶೀಲತೆಗೆ ರಂಗೋಲಿ ಸ್ಪರ್ಧೆ ವೇದಿಕೆ  Rangoli competition: A platform for women's creativity


ಯಲಬುರ್ಗಾ, ಸೆ. 29: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕಾಗಿ ಕೈಗೊಂಡಿರುವ ವಿವಿಧ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಶ್ರೀಧರ ಮುರುಡಿ ಹಿರೇಮಠದ ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  

ಪಟ್ಟಣದ ಶ್ರೀಧರ ಮುರುಡಿ ಹಿರೇಮಠದ ಆವರಣದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ ಮಹಿಳೆಯರ ರಂಗೋಲಿ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.  

ದೇಶದ ಅಭಿವೃದ್ಧಿಯಲ್ಲಿ ಜನರ ಸಹಭಾಗಿತ್ವವೂ ಮಹತ್ವದ್ದಾಗಿದೆ. ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ರಂಗೋಲಿಗೆ ವಿಶೇಷ ಸ್ಥಾನವಿದೆ. ಮಹಿಳೆಯರ ಸೃಜನಶೀಲತೆ, ಪ್ರತಿಭೆ ಹಾಗೂ ಕಲಾ ಸಾಮರ್ಥ್ಯವನ್ನು ಹೊರತರುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.  

ಬಿಜೆಪಿ ಪಕ್ಷದ ವಕ್ತಾರ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿ, ಮೂಲಸೌಕರ್ಯ, ಡಿಜಿಟಲ್ ತಂತ್ರಜ್ಞಾನ, ಸ್ವಚ್ಛತೆ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಯೋಜನೆಗಳು ಜಾರಿಯಾಗಿವೆ ಎಂದು ಹೇಳಿದರು. ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳ ಕುರಿತು ವಿವರಿಸಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಸಂತೋಷಿಮಾ ಜೋಶಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಸೇವಾ ಮನೋಭಾವದಿಂದ ಆಚರಿಸುವ ಉದ್ದೇಶದಿಂದ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಮಹಿಳೆಯರ ಪ್ರತಿಭೆ ಹಾಗೂ ಸೃಜನಶೀಲತೆಗೆ ವೇದಿಕೆ ಕಲ್ಪಿಸುವುದರ ಜೊತೆಗೆ, ಸಮಾಜದಲ್ಲಿ ಮಹಿಳಾ ಸಬಲೀಕರಣದ ಸಂದೇಶ ಸಾರುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.