ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ : ನ್ಯಾಯಾಲಯದ ಮಹತ್ವದ ತೀರ್ಪು


ಬೆಳಗಾವಿ : ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿ ತೀರ್ಪು ನೀಡಿದೆ.

   ಜಿಲ್ಲೆಯ ಸವದತ್ತಿ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಅತ್ಯಾಚಾರ ಬಗ್ಗೆ ಬಾಲಕಿಯ ತಂದೆ ದೂರು ನೀಡಿದ್ದರು. ಬಾಲಕಿಯ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸವದತ್ತಿ ಪೊಲೀಸರು ಮಂಗಳೂರಿನಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿ ತಂದು ಪೋಷಕರ ಮಡಿಲಿಗೆ ಒಪ್ಪಿಸಿದ್ದರು.

   ಈ ಪ್ರಕರಣದ ಆರೋಪಿಯಾಗಿದ್ದ ಸವದತ್ತಿ ತಾಲೂಕಿನ ಉಗರಗೋಳದ ನಿವಾಸಿ ಹುಲಿಗೆಪ್ಪ ಶಿವಲಿಂಗಪ್ಪ ವಡ್ಡರ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು.

    ಅಂದಿನ ತನಿಖಾಧಿಕಾರಿಯಾಗಿದ್ದ ಮಂಜುನಾಥ ನಡುವಿನಮನಿ ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಮತಿ ಸಿ ಎಂ ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹುಲಿಗೆಪ್ಪ ಶಿವಲಿಂಗಪ್ಪ ವಡ್ಡರ ಈತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

  ನೊಂದ ಬಾಲಕಿಗೆ 1 ಲಕ್ಷರೂ. ಪರಿಹಾರ ನೀಡಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಎಲ್. ವಿ ಪಾಟೀಲ ಅವರು ವಾದ ಮಂಡಿಸಿದ್ದರು.