ಸೈಯದ್‌ಗೆ ವಿಧಾನ ಪರಿಷತ್ ಸ್ಥಾನಕ್ಕೆ ಶಿಫಾರಸು

ಸೈಯದ್‌ಗೆ ವಿಧಾನ ಪರಿಷತ್ ಸ್ಥಾನಕ್ಕೆ ಶಿಫಾರಸು  Recommendation of Syed for Legislative Council seat


ಕೊಪ್ಪಳ  30: ಸಮಾಜ ಸೇವಕ ಡಾ. ಕೆ.ಎಂ. ಸೈಯದ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಲು ಕೋರಿ, ಅವರ ಅಭಿಮಾನಿ ಬಳಗದವರು ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.  

ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಜನರೊಂದಿಗೆ ಹಲವು ವರ್ಷಗಳಿಂದ ಉತ್ತಮ ಬಾಂಧವ್ಯ ಹೊಂದಿರುವ ಡಾ. ಕೆ.ಎಂ. ಸೈಯದ್ ಅವರು ಸಮಾಜ ಸೇವೆ, ಜನಪರ ಕಾರ್ಯಗಳು ಹಾಗೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಕೆಪಿಸಿಸಿ ರಾಜ್ಯ ಸಮಿತಿಯ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಇತ್ತೀಚಿನ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಶ್ರಮಿಸಿ ಪಕ್ಷದ ಗೆಲುವಿಗೆ ಸಹಕರಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.  

ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸೈಯದ್ ಅವರ ಸಾಮಾಜಿಕ ಸೇವೆ, ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಜನರೊಂದಿಗಿನ ಉತ್ತಮ ಸಂಪರ್ಕವನ್ನು ಪರಿಗಣಿಸಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನೇಮಕ ಮಾಡಲು ಶಿಫಾರಸು ಮಾಡುವಂತೆ ಮನವಿ ಮಾಡಲಾಗಿದೆ.  

ಅವಕಾಶ ದೊರೆತರೆ ಕೊಪ್ಪಳ, ಗದಗ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಭಾಗಗಳ ಜನರ ಸಮಸ್ಯೆಗಳಿಗೆ ವಿಧಾನ ಪರಿಷತ್‌ನಲ್ಲಿ ಪರಿಣಾಮಕಾರಿಯಾಗಿ ಧ್ವನಿಯಾಗಲಿದ್ದಾರೆ ಎಂದು ಅಭಿಮಾನಿ ಬಳಗ ವಿಶ್ವಾಸ ವ್ಯಕ್ತಪಡಿಸಿದೆ.  ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಸದಸ್ಯ ಕೆ. ರಾಜಶೇಖರ ಹಿಟ್ನಾಳ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.