ನಾಗ್ಪುರ, ನವೆಂಬರ್ 9 : ರಾಮ ಜನ್ಮಭೂಮಿ-ಬಾಬರಿ ಮಸೀದಿ ಜಮೀನು ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಶನಿವಾರ ನೀಡಿರುವ ತೀರ್ಪನ್ನು ಎಲ್ಲರೂ ಗೌರವಿಸಬೇಕು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ. ಜನರು ಶಾಂತಿ ಕಾಪಾಡಬೇಕು ಮತ್ತು ತೀರ್ಪನ್ನು ಗೌರವಿಸಬೇಕು. ಯಾವುದೇ ಅಹಿತಕರ ಘಟನೆ ಎಲ್ಲಿಯೂ ನಡೆಯದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ. ಶಾಂತವಾಗಿರುವುದು ಜನರ ಕರ್ತವ್ಯ ಎಂದು ಗಡ್ಕರಿ ಇಲ್ಲಿನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ರಾಮ ಜನ್ಮಭೂಮಿ-ಬಾಬರಿ ಮಸೀದಿ ಜಮೀನು ವಿವಾದಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಶನಿವಾರ ತೀಪು ಪ್ರಕಟಿಸಿ, ಜಮೀನನ್ನು ರಾಮ ಲಲ್ಲಾಗೆ ನೀಡುವಂತೆ ಆದೇಶಿಸಿದೆ.