ಬೆಂಗಳೂರು, ಸೆ 6: ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಸಂಜೆಯವರೆಗೆ ಸುಮಾರು 1.70 ಲಕ್ಷ ಕ್ಯೂಸೆಕ್ಸ್ ನೀರು ಬರಬಹುದು. ಸುಮಾರು ಎರಡು ಲಕ್ಷ ಕ್ಯೂಸೆಕ್ಸ್ ವರೆಗೆ ನೀರು ಬಿಡುಗಡೆಯಾದರೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕೂಡ ಕೃಷ್ಣಾ ನದಿ ಪಾತ್ರದಲ್ಲೇ ವಾಸ ಮಾಡುತ್ತಿರುವ ವ್ಯಕ್ತಿ. ಈಗಾಗಲೇ ಆಲಮಟ್ಟಿ ಜಲಾಶಯದಿಂದ ಸುಮಾರು 1.50 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟು ಹೆಚ್ಚುವರಿಯಾಗಿ ಬರುವ ನೀರು ಸಂಗ್ರಹ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 4 ಲಕ್ಷ ಕ್ಯೂಸೆಕ್ಸ್ ಗಿಂತ ಹೆಚ್ಚು ನೀರು ಬಂದಾಗ ಮಾತ್ರ ಕೃಷ್ಣಾ ನದಿಯಲ್ಲಿ ಅಪಾಯಮಟ್ಟ ತಲುಪುತ್ತದೆ. ಈಗ ಜನ ಆತಂಕ ಪಡುವ ಅಗತ್ಯವಿಲ್ಲ. ಆದರೂ ಜಿಲ್ಲಾಡಳಿತ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಪರಿಹಾರ ವಿತರಣೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಆರ್ಟಿ.ಜಿ.ಎಸ್ ಮೂಲಕ ಅರ್ಹರಿಗೆ ನೇರವಾಗಿ ಪರಿಹಾರ ನೀಡಲಾಗುತ್ತಿದೆ. ಯಾವುದೇ ಸಮಸ್ಯೆ ಇಲ್ಲ, ಈ ಬಗ್ಗೆ ಮಾಸಡಿರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದವು ಎಂದು ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದರು.