ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಮಿಷ: ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಸುಳ್ಳಿನ ಕಂತೆ
ಬೆಂಗಳೂರು 14: ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಟಾಂಗ್ ನೀಡಿದ್ದಾರೆ.
ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ ನೀಡಲಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಅವರು, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ರೂ.50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು, ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ರೂ.50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ ಎಂದು ಟಾಂಗ್ ನೀಡಿದ್ದಾರೆ.