ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 : ಪೂರ್ವಭಾವಿ ಸಭೆ : ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 : ಪೂರ್ವಭಾವಿ ಸಭೆ : ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ SSLC Exam-2: Preliminary meeting: Take steps to conduct the exam systematically

ಲೋಕದರ್ಶನ ವರದಿ 

ಗದಗ 16 : ಜಿಲ್ಲೆಯಲ್ಲಿ ಮೇ 18 ರಿಂದ 25 ರವರೆಗೆ ಜರುಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಯನ್ನು ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ನಡೆಸಲು ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್‌.  ತಿಳಿಸಿದರು. ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು  ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ  ಜಾರಿಗೊಳಿಸಲಾಗಿದ್ದು ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್‌. ತಿಳಿಸಿದರು. ಈ ಸಂದರ್ಭದಲ್ಲಿ  ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ ಬಂದೋಬಸ್ತ, ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ಜರುಗಿಸುವ ಕುರಿತು ಸೂಕ್ತ ವ್ಯವಸ್ಥೆ ಕೈಗೊಳ್ಳುವ  ಕುರಿತು  ಚರ್ಚಿಸಲಾಯಿತು. ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಎಚ್‌.ಬಿ.ರಡ್ಡೇರ್ , ಡಿವೈಪಿಸಿ ಎಂ.ಎಸ್‌.ಕಂಬಳಿ,   ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು   ಹಾಜರಿದ್ದರು.