ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ; ನಿಯೋಜಿತ ಅಧಿಕಾರಿ ಸಿಬ್ಬಂದಿಗಳು ನಿಯಮಾನುಸಾರ ತಮ್ಮ ಕರ್ತವ್ಯ ನಿರ್ವಹಿಸಬೇಕು: -ಜಿಲ್ಲಾಧಿಕಾರಿ ದಿವ್ಯ ಪ್ರಭು

SSLC examination should be conducted transparently; assigned officers and staff should perform their

ಲೋಕದರ್ಶನ ವರದಿ 

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ; ನಿಯೋಜಿತ ಅಧಿಕಾರಿ ಸಿಬ್ಬಂದಿಗಳು ನಿಯಮಾನುಸಾರ ತಮ್ಮ ಕರ್ತವ್ಯ ನಿರ್ವಹಿಸಬೇಕು:                                                   -ಜಿಲ್ಲಾಧಿಕಾರಿ ದಿವ್ಯ ಪ್ರಭು 

ಧಾರವಾಡ 17: ಮಾರ್ಚ್‌ 21 ರಿಂದ ಆರಂಭವಾಗುವ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ-1 ಅತ್ಯಂತ ಪಾರದರ್ಶಕವಾಗಿ ಮತ್ತು ವಿದ್ಯಾರ್ಥಿಗಳಿಗೆ ಉತ್ತಮವಾದ ವಾತಾವರಣದಲ್ಲಿ ಜರುಗಬೇಕು. ಯಾವುದೇ ರೀತಿಯ ಮಾಲ್‌ಪ್ರಾಕ್ಟೀಸ್‌ಗೆ ಅವಕಾಶವಾಗದಂತೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. 

ಅವರು ಇಂದು ಸಂಜೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ 2024-25 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ-1 ಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿರ್ವಹಿಸಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಸಭೆ ಜರುಗಿಸಿ, ಮಾತನಾಡಿದರು.  

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ನಿಯೋಜಿತರು ಪಾಲಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲ ಸೌಕರ್ಯ, ಸಿ.ಸಿ.ಟಿವಿ ಕಲ್ಪಿಸುವುದನ್ನು ಮೇಲಾಧಿಕಾರಿಗಳು ಖಾತರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಕಡ್ಡಾಯವಾಗಿದ್ದು, ವೆಬ್‌ಕಾಸ್ಟಿಂಗ್‌ಗೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.  

ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ತಾವು ಪ್ರವಾಸ ಮಾಡಿ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ್ದು, ವಿದ್ಯಾರ್ಥಿಗಳು ಯಾವುದೇ ಭಯ ಬೀತಿ ಇಲ್ಲದೆ, ಖುಷಿಯಿಂದ ಪರೀಕ್ಷೆ ಬರೆಯುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿನ ಬದಲಾವಣೆ ನೋಡಿ ಸಂತಸವಾಗಿದೆ ಎಂದರು.  

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಪರೀಕ್ಷೆ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಸಮಯದಲ್ಲಿ ಅನ್ಯ ವ್ಯಕ್ತಿಗಳು, ಸಂಬಂಧಪಡದವರು, ಮಾಧ್ಯಮಗಳಿಗೆ ಪ್ರವೇಶವಿರುವುದಿಲ್ಲ. ವಿದ್ಯಾರ್ಥಿಗಳು ಶಾಂತ ರೀತಿಯಿಂದ ಮುಕ್ತವಾಗಿ ಪರೀಕ್ಷೆ ಬರೆಯುವಂತೆ ವಾತಾವರಣ ಇರಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 144 ಕಲಂ ಜಾರಿ ಇರುತ್ತದೆ. ನಿಯೋಜಿತರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕೆಂದು ಹೇಳಿದರು.  

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಎಸ್‌.ಕೆಳದಿಮಠ ಅವರು ಪರೀಕ್ಷಾ ಸಿದ್ಧತೆ, ಪರೀಕ್ಷಾ ಕೇಂದ್ರಗಳಲ್ಲಿ ಸೌಕರ್ಯ, ಸಿ.ಸಿ.ಟಿವಿ ಅಳವಡಿಕೆ ಸೇರಿದಂತೆ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.  

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಜಯಶ್ರೀ ಕಾರೇಕರ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ವೇಧಿಕೆಯಲ್ಲಿದ್ದರು. ಜಿಲ್ಲಾ ಯೋಜನಾ ಸಮನ್ವಯನಾಧಿಕಾರಿ ಎಸ್‌.ಎಂ.ಹುಡೇದಮನಿ ಕಾರ್ಯಕ್ರಮ ನಿರೂಪಿಸಿದರು.  

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧಿನ ಅಧಿಕಾರಿಗಳು, ಕೊಠಡಿ ಮೇಲ್ವಿಚಾರಕರು ಭಾಗವಹಿಸಿದ್ದರು.