ಸಕಾಲ ಯೋಜನೆಯ ಪ್ರಗತಿ ಪರೀಶೀಲನಾ ಸಭೆ
ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಬೇಡ
ಗದಗ 19: ಸಕಾಲ ಯೋಜನೆಯಡಿ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿಯಲ್ಲಿ ವಿನಾ ಕಾರಣ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಸಕಾಲ ಯೋಜನೆಯಡಿ ಇಲಾಖೆಗಳಿಗೆ ನಿಗದಿಪಡಿಸಿದ ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿಗಳನ್ನು ಸ್ವೀಕರಿಸಬೇಕು. ಕೆಲವು ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಬೇಕು ಎಂದರು.
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಈ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದರು. ಸಕಾಲ ಯೋಜನೆಯ ಜಿಲ್ಲಾ ಮಟ್ಟದ ಸಭೆಗೆ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಆರೋಗ್ಯ. ಕೃಷಿ. ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಯವರು ಸಕಾಲ ಯೋಜನೆಯ ಅರ್ಜಿಗಳ ಕುರಿತು ಹೆಚ್ಚಿನ ಶ್ರಮ ವಹಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆ0ು ಅಧಿಕಾರಿಗಳೇ ಹೊಣೆಗಾರರಾತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿ.ಪಂಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ ಇಲಾಖೆಯ ಅಧಿಕಾರಿಗಳು ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ, ಯುವಜನ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.