ಸಾವಂತ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ, ಜಾವಡೇಕರ್ ಗೆ ಹೆಚ್ಚುವರಿ ಜವಾಬ್ದಾರಿ

ನವದೆಹಲಿ, ನ 12 :       ಮಹಾರಾಷ್ಟ್ರದ ಶಿವಸೇನೆಯ ಏಕೈಕ ಕೇಂದ್ರ ಸಚಿವ ಅರವಿಂದ ಸಾವಂತ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಮಂಗಳವಾರ ಅಂಗೀಕರಿಸಿದ್ದಾರೆ.     ಪ್ರಧಾನ ಮಂತ್ರಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಸಂವಿಧಾನದ 75ನೇ ಪರಿಚ್ಛೇದದ 2ನೇ ಕಲಂ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸಚಿವ ಅರವಿಂದ ಗಣಪತ್ ಸಾವಂತ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.     ಸಾವಂತ್ ಅವರ ರಾಜೀನಾಮೆಯಿಂದ ತೆರವಾಗಿರುವ ಭಾರಿ ಉದ್ಯಮ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ವಹಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.   ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷದ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾವಂತ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.     ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಮತ್ತು ಶಿವಸೇನೆ ನಡುವಿನ ಒಪ್ಪಂದಕ್ಕೆ ಬದ್ಧವಾಗಿರಲು ಬಿಜೆಪಿ ಒಪ್ಪದ ಹಿನ್ನೆಲೆಯಲ್ಲಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ಸಾವಂತ್ ತಿಳಿಸಿದ್ದಾರೆ.     ಬಿಜೆಪಿಯ  ಈ ವರ್ತನೆ ಆಘಾತ ತಂದಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ಹುದ್ದೆ ಹಂಚಿಕೆ ಕುರಿತು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.