ತಮಿಳುನಾಡಿನಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ: 7 ಮಂದಿ ಸಾವು, 4 ಜನರಿಗೆ ಗಾಯ

ತಮಿಳುನಾಡಿನಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ: 7 ಮಂದಿ ಸಾವು, 4 ಜನರಿಗೆ ಗಾಯ Seven Killed, Four Injured in Two Separate Road Accidents in Tamil Nadu

ಚೆನ್ನೈ, ಸೆ. 24: ತಮಿಳುನಾಡಿನ ಪೆರಂಬಲೂರು ಮತ್ತು ಕೃಷ್ಣಗಿರಿ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಶಾಲಾ ಶಿಕ್ಷಕರು ಹಾಗೂ 2ನೇ ತರಗತಿ ವಿದ್ಯಾರ್ಥಿ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಪೆರಂಬಲೂರು ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಒಮ್ನಿಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ರಾಮನಾಥಪುರಂ ಜಿಲ್ಲೆಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಚೆನ್ನೈಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ಅತಿವೇಗದಲ್ಲಿ ಚಲಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಒಮ್ನಿಬಸ್‌ನ ಹಿಂದೆ ಬರುತ್ತಿದ್ದ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆಯರು ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಅವರನ್ನು ಪೆರಂಬಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ನಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

ಇನ್ನೊಂದು ಅಪಘಾತವು ಬುಧವಾರ ಸಂಜೆ ಕೃಷ್ಣಗಿರಿ ಜಿಲ್ಲೆಯ ವೇಪ್ಪನಪಳ್ಳಿ ಸಮೀಪ ಸಂಭವಿಸಿದೆ. ಕಲ್ಲು ತುಂಬಿದ್ದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಾಲಾ ಶಿಕ್ಷಕರು ಹಾಗೂ 2ನೇ ತರಗತಿ ವಿದ್ಯಾರ್ಥಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಮೃತರನ್ನು ಮಹಾರಾಷ್ಟ್ರ ಮೂಲದ ಹಾಗೂ ಕೃಷ್ಣಗಿರಿಯಲ್ಲಿ ವಾಸವಿದ್ದ ಖಾಸಗಿ ಮೆಟ್ರಿಕ್ಯುಲೇಷನ್ ಶಾಲೆಯ ಹಿಂದಿ ಶಿಕ್ಷಕಿ ಮುಸ್ಕಾನ್ ಗೌಸ್ ಶೇಖ್ (28), ಅವರ ಪುತ್ರ ಹಾಗೂ ಅದೇ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಫುರ್ಕಾನ್ (7), ಮತ್ತು ಕೃಷ್ಣಗಿರಿ ಮೂಲದ ಸಮಾಜ ವಿಜ್ಞಾನ ಶಿಕ್ಷಕಿ ಸುಧಾರಾಣಿ (40) ಎಂದು ಗುರುತಿಸಲಾಗಿದೆ.

ಶಾಲೆ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ಲಾರಿ ಸ್ಕೂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಬಿದ್ದಿದ್ದು, ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೇಪ್ಪನಪಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

ಅಪಘಾತದ ಬಳಿಕ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.