ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ ಶಿವಸೇನೆ ಸಂಸದ ಅರವಿಂದ ಸಾವಂತ್

 ಮುಂಬೈ, ನ.11 :      ಕೇಂದ್ರೀಯ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಮತ್ತು ಶಿವಸೇನೆ ಸಂಸದ ಅರವಿಂದ ಸಾವಂತ್ ಅವರು ಸೋಮವಾರ ಬೆಳಿಗ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ನಲ್ಲಿ ಪ್ರಕಟಿಸಿದ್ದಾರೆ. ರಾಜೀನಾಮೆಯ ವಿವರಗಳನ್ನು ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸುವುದಾಗಿ ಅವರು ಪ್ರಕಟಿಸಿದ್ದಾರೆ.  ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಕೊನೆಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟದಿಂದ  ಹೊರಬರುತ್ತಿದ್ದೇನೆ ಎಂದು ಅವರು ತಮ್ಮ ಟ್ವೀಟ್ಗಳಲ್ಲಿ ಸ್ಪಷ್ಟಪಡಿಸಿದ್ದಾರೆ. ಮೈತ್ರಿಯ ಸಂದರ್ಭದಲ್ಲಿ ಕೆಲವೊಂದು ನಿಯಮಗಳನ್ನು ರೂಪಿಸಲಾಗಿತ್ತು. ಅವುಗಳನ್ನು ಈಡೇರಿಸಿಲ್ಲ. ಆದ್ದರಿಂದ ಸರ್ಕಾರಿಂದ ಹೊರಬರಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು. ಭಾನುವಾರ ರಾತ್ರಿ ಬಿಜೆಪಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ತನ್ನ ಅಸಮರ್ಥತೆಯನ್ನು ವ್ಯಕ್ತಪಡಿಸಿತ್ತು. ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಶಿವಸೇನೆಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ. ಎನ್ಸಿಪಿ ಮತ್ತು ಕಾಂಗ್ರೆಸ್ ಬೆಂಬಲವನ್ನು ಸೇನಾ ನಿರೀಕ್ಷಿಸುತ್ತಿದೆ. ಮಹಾರಾಷ್ಟ್ರದಲ್ಲಿ ಸೇನೆಗೆ ಬೆಂಬಲ ನೀಡಬೇಕಾದರೆ ಕೇಂದ್ರ ಸಂಪುಟದಿಂದ ಹೊರಬರಬೇಕು ಎಂದು ಎನ್ಸಿಪಿ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಸಾವಂತ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಸೇನೆ-ಎನ್ಸಿಪಿ, ಕಾಂಗ್ರೆಸ್ ಸರ್ಕಾರ ರಚಿಸಲು ವೇದಿಕೆ ಸಿದ್ಧಗೊಂಡಂತಾಗಿದೆ.