ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರಿಗೆ ವಿಶೇಷ ತರಬೇತಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರಿಗೆ ವಿಶೇಷ ತರಬೇತಿ  Special training for Presidents and Directors of Primary Agricultural Credit Cooperative Societies

ಲೋಕದರ್ಶನ ವರದಿ    

ಗದಗ, ಸೆ. 2: ಸಹಕಾರ ಇಲಾಖೆ ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಕೆಸಿಸಿ ಬ್ಯಾಂಕ್ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ವಿಶೇಷ ತರಬೇತಿ ಶಿಬಿರ ನಡೆಯಿತು.  

ಶಿರಹಟ್ಟಿಯ ನಾಟಕ ಕಲಾ ಬ್ರಹ್ಮ ಶ್ರೀ ಎಚ್‌. ವೆಂಕುಬರಾವ ಕಲಾಭವನದ ಸಭಾಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮವನ್ನು ಕೆಸಿಸಿ ಬ್ಯಾಂಕ್ ಧಾರವಾಡದ ನಿರ್ದೇಶಕ ಗೋವಿಂದಗೌಡ ವಿ. ಪಾಟೀಲ ಉದ್ಘಾಟಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಕೃಷಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಪಡಿಸುವ ಉದ್ದೇಶದಿಂದ ಸಂಘಗಳನ್ನು ಬಹುಸೇವಾ ಕೇಂದ್ರಗಳಾಗಿ ಪರಿವರ್ತಿಸಲಾಗುತ್ತಿದೆ. ಇದಕ್ಕಾಗಿ ಪ್ರಧಾನಮಂತ್ರಿ ಅವರು ದೇಶಾದ್ಯಂತ ?1 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ್ದು, ಕರ್ನಾಟಕಕ್ಕೆ ?4,525 ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.  

ದೇಶದ ಜನಸಂಖ್ಯೆಯ ಸುಮಾರು ಶೇ.58ರಷ್ಟು ಜನರ ಆದಾಯ ಕೃಷಿ ಮತ್ತು ಕೃಷಿ ಆಧಾರಿತ ಚಟುವಟಿಕೆಗಳಿಂದ ಬರುತ್ತಿದೆ. ದೇಶದ ಶೇ.85ರಷ್ಟು ರೈತರು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಾಗಿದ್ದು, ಎರಡು ಹೆಕ್ಟೇರ್ಗಿಂತ ಕಡಿಮೆ ಕೃಷಿ ಭೂಮಿ ಹೊಂದಿದ್ದಾರೆ. ಇಂತಹ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸುವುದು ಅಗತ್ಯವಾಗಿದೆ ಎಂದರು.