ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ

ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ  Sports contribute to the all-round development of students.

ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ  

ಕೊಲ್ಹಾರ ಸೆ.10: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಸ್‌.ಬಿ. ಪತಂಗಿ ಹೇಳಿದರು.  

ಪಟ್ಟಣದ ಸಂಗಮೇಶ್ವರ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಗುರುವಾರ ಆಯೋಜಿಸಿದ್ದ ಕೊಲ್ಹಾರ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.  

ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಅಗತ್ಯ. ಕ್ರೀಡಾಕೂಟಗಳಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.  

ಕೂಡಗಿ ಪಿಎಸ್‌ಐ ಅಶೋಕ ನಾಯಕ, ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಯಾವುದಾದರೂ ಒಂದು ಕ್ರೀಡೆಯಲ್ಲಿ ವಿಶೇಷ ಪ್ರತಿಭೆ ಇರಬಹುದು ಎಂದರು.  

ಕಾರ್ಯಕ್ರಮದಲ್ಲಿ ಕ್ರೀಡಾಕೂಟಕ್ಕೆ ಟ್ರೋಫಿ ಕೊಡುಗೆ ನೀಡಿದ ಬಸಪ್ಪ ಕೊಠಾರಿ ಹಾಗೂ ದೈಹಿಕ ಶಿಕ್ಷಣ ಅಧಿಕಾರಿಗಳಾದ ಆರ್‌.ಎಸ್‌. ನರೇಗಲ್, ಎಸ್‌.ಎಸ್‌. ಅವಟಿ, ಎಂ.ಜಿ. ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಬಿ.ಯು. ಗಿಡ್ಡಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕರು, ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.