ಬೆಂಗಳೂರು, ಜ 19 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಭಾನುವಾರ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಚಿಕ್ಕಜಾಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಮ್ಮ ಮಕ್ಕಳ ಜೊತೆಗೂಡಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರತಿ ವರ್ಷ ಮುಖ್ಯಮಂತ್ರಿಗಳು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದರು. ಆದರೆ, ಈ ಬಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿಗಳ ಬದಲಾಗಿ ಆರೋಗ್ಯ ಸಚಿವ ಶ್ರೀರಾಮುಲು ಲಸಿಕೆ ಹಾಕಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ರಾಜ್ಯದ 64,65,561 ಮಕ್ಕಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಕ್ಕಳಿಗೆ ಪಲ್ಸ್ ಪೋಲಿಯೊ ಹಾಕಲಾಗುತ್ತದೆ.
ಲಸಿಕೆ ಹಾಕಲು ರಾಜ್ಯಾದ್ಯಂತ 33,021 ಬೂತ್ಗಳನ್ನು ಸ್ಥಾಪಿಸಲಾಗಿದ್ದು, 46,620 ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿದ್ದಾರೆ.