ಬೆಳಗಾವಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ಲೋಪದೋಷ ಸರಿಪಡಿಸಲು ಸೂಚನೆ

ಬೆಳಗಾವಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ಲೋಪದೋಷ ಸರಿಪಡಿಸಲು ಸೂಚನೆ State Women's Commission Chairperson visits Belagavi District Hospital; directs officials to rectify

ಲೋಕದರ್ಶನ ವರದಿ 

ಬೆಳಗಾವಿ  07: ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸುವ ಮಹಿಳೆಯರು ಹಾಗೂ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಸ್ಪತ್ರೆಗೆ ಸೋಮವಾರ (ಸೆ.07) ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರೀಶೀಲಿಸಿ ಅವರು ಮಾತನಾಡಿದರು.  

ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ಇನ್ನಷ್ಟು ಸುಧಾರಣೆಯ ಅಗತ್ಯವಿದೆ. ಹೆರಿಗೆಗೆ ಆಗಮಿಸುವ ಗರ್ಭಿಣಿಯರು ಅಗತ್ಯ ರಕ್ತ ತಪಾಸಣೆಗೆ ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ಅಲೆದಾಡುವಂತಾಗಿದೆ ಎಂಬ ದೂರುಗಳು ಬಂದಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಕುರಿತು ತ್ವರಿತವಾಗಿ ಪರಿಹಾರ ಕಂಡುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಬಾಣಂತಿಯರಿಗೆ ಕೇವಲ ಒಂದೇ ಶೌಚಾಲಯವಿದ್ದು, ಸ್ವಚ್ಛತೆಯಿಲ್ಲದೆ ತೊಂದರೆಯಾಗುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲು ಸೂಚಿಸಿದರು. ಚಿಕಿತ್ಸೆಗಾಗಿ ಬರುವ ಮಹಿಳೆಯರು ಹಾಗೂ ಗರ್ಭಿಣಿಯರಿಗೆ ಗೌರವಯುತ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವುದು ಆಸ್ಪತ್ರೆ ಸಿಬ್ಬಂದಿಯ ಜವಾಬ್ದಾರಿಯಾಗಿದೆ ಎಂದರು. 

ಸರ್ಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಅಧಿಕಾರಿಗಳಿಗೆ ದಬ್ಬಾಳಿಕೆ ಅಥವಾ ಬೆದರಿಕೆ ಹಾಕಿದರೆ ಸಹಿಸುವುದಿಲ್ಲ. ಅಂತಹ ಪ್ರಕರಣಗಳಲ್ಲಿ ಮಹಿಳಾ ಅಧಿಕಾರಿಗಳು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಬಹುದು, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. 

ಆರೋಗ್ಯ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದು, ಆಸ್ಪತ್ರೆಯಲ್ಲಿನ ಮಹಿಳೆಯರು ಮತ್ತು ರೋಗಿಗಳ ಸಮಸ್ಯೆಗಳ ಕುರಿತು ಬಂದಿರುವ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸ್ಪಷ್ಟಪಡಿಸಿದರು. 

ಇದೇ ಸಂದರ್ಭದಲ್ಲಿ ನಗರದಲ್ಲಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಹಾಗೂ ರೋಗಿಗಳು ಎದುರಿಸುತ್ತಿರುವ ಅವ್ಯವಸ್ಥೆ, ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ಲೋಪಗಳನ್ನು ಪರೀಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ “ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿ” ಸಂಘಟನೆ ವತಿಯಿಂದ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ಬಿಮ್ಸ್‌ ಆಸ್ಪತ್ರೆಯ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ,ಬಿಮ್ಸ್‌ ಆಡಳಿತಾಧಿಕಾರಿ ರೇಷ್ಮಾ ತಾಳಿಕೋಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಡಾ.ಜಗದೀಶ, ಸ್ಥಳೀಯ ವೈದ್ಯಾಧಿಕಾರಿ ಡಾ.ಸರೋಜ ತಿಗಡಿ ಮುಂತಾದವರು ಉಪಸ್ಥಿತರಿದ್ದರು.