ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳ ಪರವಾಗಿದೆ: ಮುಂಡರಗಿ ನಾಗರಾಜ್ ಅಭಿಮತ
State government is in favor of job seekers: Mundaragi Nagaraj's opinion
ಬಳ್ಳಾರಿ 04: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳ ಪರವಾಗಿದೆ ಎಂದು ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಹಾಗೂ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿಕೆವೈ ಯೋಜನೆಯಡಿ ನಗರದ ಶ್ರೀಮತಿ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರಿ್ಡಸಿದ್ದ ಬಳ್ಳಾರಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಒಳಮೀಸಲಾತಿ ಜಾರಿ ಅನುಷ್ಠಾನದಿಂದ ಹುದ್ದೆ ಭರ್ತಿ ಪ್ರಕ್ರಿಯೆ ತಡೆಹಿಡಿಯಲಾಗಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟದ ನಿರ್ಧಾರದಂತೆ ಸದ್ಯದಲ್ಲೇ 52,000 ಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಿರುವ ಈ ಉದ್ಯೋಗ ಮೇಳವು ನಿರುದ್ಯೋಗಿ ಯುವಕರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಮೇಳದಲ್ಲಿ ಸುಮಾರು 60ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಸುಮಾರು 6,000ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.
2017-18ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಲ್ಲಿ ಬಳ್ಳಾರಿಯ ಜಿಂದಾಲ್ ಬಳಿ ನಡೆದ ಮೂರು ದಿನಗಳ ಮೇಳದಲ್ಲಿ 350 ಕಂಪನಿಗಳು ಭಾಗವಹಿಸಿ, 30,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರಕಿಸಿಕೊಡಲಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಮೇಳದಲ್ಲಿ ಸಾವಿರಾರು ಜನರಿಗೆ ಕೆಲಸ ಸಿಕ್ಕಿದೆ. ಉದ್ಯೋಗ ಸಿಗದ ಪದವೀಧರರಿಗೆ ಆಸರೆಯಾಗಲು ಸರ್ಕಾರ ‘ಯುವನಿಧಿ' ಯೋಜನೆಯಡಿ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯು ಕೈಗಾರಿಕಾ ಹಬ್ ಆಗಿರುವುದರಿಂದ, ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ, ವಿವಿಧ ದೊಡ್ಡ ಕೈಗಾರಿಕೆಗಳ ಸಹಯೋಗದೊಂದಿಗೆ ಇನ್ನೂ ಬೃಹತ್ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸುವ ಕುರಿತು ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.
ಮಹಾನಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯು ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತಿ ಹೆಚ್ಚು ಕೈಗಾರಿಕೆ ಕಂಪನಿಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಈ ಮಹತ್ವದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಬಳ್ಳಾರಿ ವಲಯ ಪೊಲೀಸ್ ಉಪಮಹಾನೀರೀಕ್ಷಕ ಡಾ.ಪಿ.ಎಸ್. ಹರ್ಷ ಅವರು ಮಾತನಾಡಿ, ಯುವಪೀಳಿಗೆಗೆ ಅಗತ್ಯವಾದುದು ಉದ್ಯೋಗಾವಕಾಶ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಮೇಳಗಳು ಅತಿ ಅವಶ್ಯಕವಾಗಿವೆ. ಈ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಅಭ್ಯರ್ಥಿಗಳ ಪ್ರೊಫೈಲ್‌ಗಳನ್ನು ಡಿಜಿಟಲೀಕರಣಗೊಳಿಸಿ, ಪ್ರಾದೇಶಿಕ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ವಿವಿಧ ಅವಕಾಶಗಳಿಗೆ ಕಳುಹಿಸಿಕೊಡುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಈ ಮೇಳವು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಒಂದು ವೇಳೆ ಇಲ್ಲಿ ಉದ್ಯೋಗ ದೊರೆಯದಿದ್ದಲ್ಲಿ, ಯಾರೂ ನಿರಾಶರಾಗಬಾರದು. ಅಭ್ಯರ್ಥಿಗಳು ತಮಗೆ ಆಸಕ್ತಿ ಮತ್ತು ಅಗತ್ಯವಿರುವ ಕೌಶಲ್ಯ ತರಬೇತಿ ಹೊಂದಬೇಕು. ಭವ್ಯ ಭಾರತದ ಭವಿಷ್ಯ ನಿರ್ಮಾಣ ಮಾಡುವ ಕಾರ್ಯ ನಿಮ್ಮಿಂದಾಗಬೇಕು ಎಂದು ಯುವ ಸಮುದಾಯವನ್ನು ಎಂದು ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಪದವೀಧರರು, ಡಿಪ್ಲೊಮಾ ವಿದ್ಯಾರ್ಥಿಗಳು ಸೇರಿದಂತೆ ಸಾಕಷ್ಟು ಪ್ರತಿಭಾವಂತ ಅಭ್ಯರ್ಥಿಗಳಿದ್ದಾರೆ. ಆದರೆ, ಕಂಪನಿಗಳು ಮತ್ತು ಅಭ್ಯರ್ಥಿಗಳ ನಡುವೆ ನೇರ ಸಂಪರ್ಕದ ಕೊರತೆಯಿದೆ. ಇದನ್ನು ಹೋಗಲಾಡಿಸಲು ಉದ್ಯೋಗ ಮೇಳ ವೇದಿಕೆ ಸಿದ್ಧಪಡಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಬಂದು ಕಂಪನಿಗಳ ಪ್ರತಿನಿಧಿಗಳನ್ನು ನೇರವಾಗಿ ಭೇಟಿ ಮಾಡಿ ಸಂದರ್ಶನ ಎದುರಿಸಬಹುದು ಎಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪುಸ್ತಕದ ಜ್ಞಾನವಿದ್ದರೆ ಸಾಲದು. ಕಂಪ್ಯೂಟರ್ ಲ್ಯಾಂಗ್ವೇಜ್‌ಗಳಾದ ಪೈಥಾನ್, ಜಾವಾ, ಡೇಟಾ ಸೈನ್ಸ್ ಹಾಗೂ ಎಐ-ಎಂಎಲ್ ನಂತಹ ವಿಶೇಷ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಮುಖ್ಯವಾಗಿ ಅಭ್ಯರ್ಥಿಗಳಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ ಇರುವುದು ಅತಿ ಮುಖ್ಯ. ಆಗ ಮಾತ್ರ ಸಂದರ್ಶನಗಳಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕೇವಲ ಪದವಿ ಪ್ರಮಾಣಪತ್ರಗಳಿಂದ ಕೆಲಸ ಸಿಗುವುದು ಕಷ್ಟ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ನಿಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಪ್‌ಡೇಟ್ ಮಾಡಿಕೊಳ್ಳುತ್ತಿರಬೇಕು. ಇಂಟರ್ನ್‌ಶಿಪ್ ಮತ್ತು ತರಬೇತಿಗಳಲ್ಲಿ ಭಾಗವಹಿಸುವ ಮೂಲಕ ಅನುಭವ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ವಿಟಿಎಸ್ ಹೆಚ್‌ಆರ್ ಸರ್ವೀಸಸ್ ನಲ್ಲಿ ಉದ್ಯೋಗ ಪಡೆದ ಆಕಾಂಕ್ಷಿ ಬಳ್ಳಾರಿಯ ಜಿ.ಎಸ್. ಹರ್ಷ ಅವರಿಗೆ ಸ್ಥಳದಲ್ಲಿಯೇ ಗಣ್ಯರು ನೇಮಕಾತಿ ಆದೇಶ ಪತ್ರ ವಿತರಿಸಿದರು.
ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನೋಂದಾಯಿಸಿಕೊಳ್ಳಲು ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿತ್ತು. ಕಾಲೇಜಿನ ವಿವಿಧ ಕೊಠಡಿಗಳಲ್ಲಿ ವಿವಿಧ ಕಂಪನಿಗಳ ಉದ್ಯೋಗದಾತರು ಅಭ್ಯರ್ಥಿಗಳನ್ನು ಸಂದರ್ಶಿಸಿದರು. ಕಾಲೇಜಿನ ಮುಂಭಾಗದಲ್ಲಿ ಮಾರಾಟಕ್ಕೆ ಸ್ವ-ಸಹಾಯ ಗುಂಪುಗಳ ಮಹಿಳೆಯರಿಂದ ತಯಾರಿಸಿದ ವಿವಿಧ ಉತ್ಪನ್ನಗಳ 5 ಮಳಿಗೆಗಳನ್ನು ಗಣ್ಯರು ಉದ್ಘಾಟಿಸಿದರು.
ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಪ್ರಹ್ಲಾದ್ ಜೋಶಿ, ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಅವ್ವಾರು ಮಂಜುನಾಥ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಉದ್ಯೋಗದಾತರು, ಉದ್ಯೋಗಾಂಕ್ಷಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 