ಸರ್ಕಾರಿ ಕಛೇರಿಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇ೦ತಹ ಉತ್ಪನ್ನಗಳ ಸೇವನೆಯನ್ನು ಸ೦ಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ(ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.
ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿ೦ದ ಹಾಗೂ ಪರೋಕ್ಷ ಧೂಮಪಾನದಿ೦ದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬ೦ದಿಗಳನ್ನು ರಕ್ಷಿಸುವ ಉದ್ದೇಶದಿ೦ದ ಈ ಕ್ರಮ ಕೈಗೊಳ್ಳಲಾಗಿದೆ.
ಈ ಸ೦ಬ೦ಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು. ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಛೇರಿಯಲ್ಲಿ ಅಥವಾ ಕಛೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು ಸೇವಿಸುವುದು ಕಂಡುಬಂದಲ್ಲಿ ನೌಕರರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.