ಹುಕ್ಕೇರಿ ಶಾಲೆಗೆ ರಾಜ್ಯಮಟ್ಟದ ಅತ್ಯುತ್ತಮ ಶಾಲಾ ಪ್ರಶಸ್ತಿ

ಹುಕ್ಕೇರಿ ಶಾಲೆಗೆ ರಾಜ್ಯಮಟ್ಟದ ಅತ್ಯುತ್ತಮ ಶಾಲಾ ಪ್ರಶಸ್ತಿ  State-level Best School Award for Hukkeri School

ಲೋಕದರ್ಶನ ವರದಿ 

ಹುಕ್ಕೇರಿ: ಶೈಕ್ಷಣಿಕ ಗುಣಮಟ್ಟ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಹುಕ್ಕೇರಿ ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ 2026ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಾಲಾ ಪ್ರಶಸ್ತಿ ಲಭಿಸಿದೆ.  

ಶಿಕ್ಷಕರ ದಿನಾಚರಣೆ ಅಂಗವಾಗಿ ರಾಯಚೂರಿನ ಕಲಾ ಸಂಕಲ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್‌ ವತಿಯಿಂದ ಪ್ರತಿವರ್ಷ ನೀಡಲಾಗುವ ಈ ಪ್ರಶಸ್ತಿಯನ್ನು ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಶಾಲೆಗೆ ಪ್ರಶಸ್ತಿ, ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.  

ಶಾಲೆಯ ಪರವಾಗಿ ಪ್ರಧಾನ ಗುರು ವಿನಾಯಕ ನಾಯಕ ಹಾಗೂ ಎಸ್ಡಿಎಂಸಿ ಅಧ್ಯಕ್ಷ ಲಗಮಪ್ಪ ಶಿವರಾಯಿ ಕಾಳಿ ಪ್ರಶಸ್ತಿ ಸ್ವೀಕರಿಸಿದರು.  ಕಾರ್ಯಕ್ರಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಕೆಳಗಿನಮನಿ, ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸಮನಿ, ಶ್ರೀದೇವಿ ಆರ್‌. ನಾಯಕ್, ರೇಖಾ ಬಡಿಗೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.