ಕಾರವಾರ 04:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ, ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯಂತೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುವ ನಿಟ್ಟಿನಲ್ಲಿ, ಪರೀಕ್ಷಾ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಡಿಸೆಂಬರ್ 7 ರಂದು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು 8 ರಂದು ಸ್ಪರ್ದಾತ್ಮಕ ಪರೀಕ್ಷೆ ನಡೆಯಲಿದ್ದು, ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಕಾರವಾರದ 16 ಮತ್ತು ಶಿರಸಿಯ 3 ಕೇಂದ್ರಗಳಲ್ಲಿ ಒಟ್ಟು 5841 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸ್ಪರ್ದಾತ್ಮಕ ಪರೀಕ್ಷೆಯು ಕಾರವಾರದ 18, ಕುಮಟಾದ 4 ಶಿರಸಿಯ 4 ಸೇರಿದಂತೆ ಒಟ್ಟು 26 ಕೇಂದ್ರಗಳಲ್ಲಿ 7903 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸುಗಮ ಮತ್ತು ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಲೋಪಗಳಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದರು. ಪ್ರಶ್ನೆ ಪತ್ರಿಕೆಗಳನ್ನು ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳ್ನು ಹಾಗೂ ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಮತ್ತು ಸ್ಥಳೀಯ ನೀರೀಕ್ಷಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಗರಿಷ್ಠ ಭದ್ರತೆಯಲ್ಲಿ ನಿಗಧಿತ ಸಮಯಕ್ಕೆ ತಲುಪಿಸಲು ಮತ್ತು ಉತ್ತರ ಪತ್ರಿಕೆಗಳನ್ನು ಜಿಲ್ಲಾ ಖಜಾನೆಗೆ ತಲುಪಿಸುವಂತೆ ಸೂಚಿಸಿದ ಅವರು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಣಿಕೆ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.ಅಭ್ಯರ್ಥಿಗಳ ಆರೋಗ್ಯದಲ್ಲಿ ತೊಂದರೆಯಾದಲ್ಲಿ ತುರ್ತು ಚಿಕಿತ್ಸೆ ನೀಡಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವೈದ್ಯಕೀಯ ಸಿಬ್ಬಂದಿಯನ್ನು ಹಾಗೂ ಅಂಬುಲೆನ್ಸ್‌ಗಳನ್ನು ನಿಯೋಜಿಸಬೇಕು. ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಮತ್ತು ಪರೀಕ್ಷಾ ದಿನದಂದು ಬಸ್‌ಗಳ ಸಂಚಾರವನ್ನು ಸಮರ್ಕವಾಗಿರುವಂತೆ ಎಚ್ಚರವಹಿಸಬೇಕು, ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಮತ್ತು ಜಾಮರ್ ಅಳವಡಿಕೆಯ ಕಾರ್ಯವನ್ನು ನಿಗಧಿತ ಅವಧಿಯೊಳಗೆ ಮುಕ್ತಾಗೊಳಿಸುವಂತೆ ಹಾಗೂ ಅಭ್ಯರ್ಥಿಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ಒದಗಿಸುವಂತೆ ಮತ್ತು ಅಭ್ಯಥಿಗಳ ಪರೀಶೀಲನಾ ಸಂದರ್ಭದಲ್ಲಿ ಲೋಕಸೇವಾ ಆಯೋಗದ ಅಧಿಕಾರಿಗಳು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ತಮಗೆ ವಹಿಸಲಾದ ಕರ್ತವ್ಯ ನಿರ್ವಹಿಸಿ, ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ಮತ್ತು ಲೋಪಗಳಾಗದಂತೆ ನೋಡಿಕೊಂಡು ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದ ಅಪರ ಜಿಲ್ಲಾಧಿಕಾರಿಗಳು, ಈ ಕಾರ್ಯದಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕಿ ಲತಾ ನಾಯ್ಕ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.