ಶಿಸ್ತು, ಸಂಯಮದಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು: ಡಾ. ಜಗಜಂಪಿ
Success comes from pursuing education with discipline and restraint: Dr. Jagajampi
ನೇಸರಗಿ 09: ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಶಿಸ್ತು, ಸಂಯಮ ಹಾಗೂ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಯಶಸ್ಸು ಖಚಿತ ಎಂದು ನಿವೃತ್ತ ಪ್ರಾಂಶುಪಾಲ ಹಾಗೂ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಬಸವರಾಜ ಜಗಜಂಪಿ ಹೇಳಿದರು. ನೇಸರಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾಭವನದಲ್ಲಿ ಬುಧವಾರ ನಡೆದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್ ಹಾಗೂ ಗೈಡ್ಸ್ ಘಟಕಗಳ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಶಿಕ್ಷಣ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟಗಳಾಗಿವೆ. ಪ್ರತಿಯೊಂದು ಹಂತದಲ್ಲೂ ಅರ್ಥಪೂರ್ಣವಾಗಿ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಹಿಂದಿನ ಕಾಲದಲ್ಲಿ ಇಂದಿನಷ್ಟು ತಂತ್ರಜ್ಞಾನ, ಆನ್ಲೈನ್ ತರಗತಿ ಹಾಗೂ ಕಂಪ್ಯೂಟರ್ ಶಿಕ್ಷಣದ ಸೌಲಭ್ಯಗಳಿರಲಿಲ್ಲ. ಅಂತಹ ಸಂದರ್ಭದಲ್ಲಿ ಶಿಕ್ಷಣ ಪಡೆದು ತಾವು ಕಲಿತ ಶಾಲೆಯಲ್ಲೇ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವುದು ಹೆಮ್ಮೆಯ ಸಂಗತಿ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಫಕ್ಕೀರನಾಯ್ಕ ಗದ್ದಿಗೌಡರ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು.
ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಅನೇಕರು ಇಂದು ಸರ್ಕಾರಿ ಹಾಗೂ ಖಾಸಗಿ ಉದ್ಯೋಗ, ಎಂಜಿನಿಯರಿಂಗ್, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಅವರಂತೆ ವಿದ್ಯಾರ್ಥಿಗಳೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪ್ರಸಕ್ತ ಸಾಲಿನಲ್ಲಿ 315 ವಿದ್ಯಾರ್ಥಿಗಳು ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದು, ಕಾಲೇಜಿನ ಅಭಿವೃದ್ಧಿಗೆ ಶಾಸಕ ಬಾಬಾಸಾಹೇಬ ಪಾಟೀಲ, ಕಾಲೇಜು ಸುಧಾರಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಹಿರಿಯರ ಸಹಕಾರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಚನಗೌಡ ಪಾಟೀಲ, ನಿಂಗಪ್ಪ ತಳವಾರ, ನಜೀರಅಹಮ್ಮದ್ ತಹಶೀಲ್ದಾರ, ಉಷಾ ನಾವಲಗಟ್ಟಿ, ಯಮನಪ್ಪ ಪೂಜೇರಿ, ಸುರೇಶ ಲೆಂಕನಟ್ಟಿ ಸೇರಿದಂತೆ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 