ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಜಿಲ್ಲಾಡಳಿತದಿಂದ ಸನ್ಮಾನ

ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಜಿಲ್ಲಾಡಳಿತದಿಂದ ಸನ್ಮಾನ  Sudiksha, silver medalist at Asian Championship, felicitated by district administration

ಲೋಕದರ್ಶನ ವರದಿ

ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಜಿಲ್ಲಾಡಳಿತದಿಂದ ಸನ್ಮಾನ  

ಬಳ್ಳಾರಿ 16: ಏಷ್ಯನ್ ಅಂಡರ್‌-23 ಅಥ್ಲೆಟಿಕ್ಸ್‌ ಚಾಂಪಿಯನ್ಶಿಪ್ನ 4ಸ100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಬಳ್ಳಾರಿ ಜಿಲ್ಲೆಯ ಪ್ರತಿಭಾವಂತ ಅಥ್ಲೀಟ್ ಸುದೀಕ್ಷಾ ಅವರನ್ನು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಆತ್ಮೀಯವಾಗಿ ಸನ್ಮಾನಿಸಿತು.  

ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಸುದೀಕ್ಷಾ ಅವರ ಸಾಧನೆ ದೇಶಕ್ಕೆ ಹಾಗೂ ಬಳ್ಳಾರಿ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಅವರ ಅಪೂರ್ವ ಸಾಧನೆಯನ್ನು ಗೌರವಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸನ್ಮಾನಿಸಲಾಗಿದ್ದು, ಜಿಲ್ಲಾ ಕ್ರೀಡಾ ಇಲಾಖೆಯ ವತಿಯಿಂದ ?50 ಸಾವಿರದ ಪ್ರೋತ್ಸಾಹಧನದ ಚೆಕ್ನ್ನು ವಿತರಿಸಲಾಗಿದೆ ಎಂದು ತಿಳಿಸಿದರು.  

ಸುದೀಕ್ಷಾ ಅವರು ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲೇ ಕೋಚ್ ಶ್ರೀ ರಾಮಸ್ವಾಮಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಈ ಸಾಧನೆ ಮಾಡಿರುವುದು ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಅವರ ಸಾಧನೆ ಜಿಲ್ಲೆಯ ಇತರ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಅಂತರರಾಷ್ಟ್ರೀಯ ಮಟ್ಟದ ಸಾಧನೆ ಮಾಡಿ ದೇಶಕ್ಕೆ ಒಲಿಂಪಿಕ್ ಪದಕ ತಂದುಕೊಡಲಿ ಎಂದು ಹಾರೈಸಿದರು.  

ದೇಶವನ್ನು ಪ್ರತಿನಿಧಿಸುವ ಅಥ್ಲೆಟಿಕ್ಸ್‌ ಕ್ರೀಡಾಪಟುಗಳಿಗೆ ಅಗತ್ಯವಾದ ಆರ್ಥಿಕ ನೆರವು, ಪ್ರೋತ್ಸಾಹ ಹಾಗೂ ಪ್ರಾಯೋಜಕತ್ವ ದೊರೆಯುವಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.  

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ರಝೂಬೇರ್ ಎನ್‌., ಸಹಾಯಕ ಆಯುಕ್ತ ರಾಜೇಶ್ ಎಚ್‌.ಡಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಸೇರಿದಂತೆ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.