ಸುಕ್ರಿ ಬೊಮ್ಮಗೌಡ ನಿಧನ: ಗಣ್ಯರಿಂದ ಸಂತಾಪ

Sukri Bommagowda passes away: Condolences from dignitaries

ಬೆಂಗಳೂರು 13: ಜಾನಪದ ಗಾಯಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮಗೌಡ (88) ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮಗೌಡ ಅವರು ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

‘ಸುಕ್ರಿ ಬೊಮ್ಮಗೌಡ ಅವರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ ಸುಕ್ರಜ್ಜಿ ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು’ ಎಂದು ತಿಳಿಸಿದ್ದಾರೆ.

‘ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದುಃಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ಸುಕ್ರಿ ಬೊಮ್ಮಗೌಡ ಹಾಲಕ್ಕಿ ಹಾಡುಗಳ ಕೋಗಿಲೆ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ 

ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ‘ಸುಕ್ರಜ್ಜಿ’ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ. ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಸುಕ್ರಿ ಬೊಮ್ಮಗೌಡ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು: ಡಿಸಿಎಂ ಡಿ.ಕೆ.ಶಿವಕುಮಾರ್

‘ಪದ್ಮಶ್ರೀ ಪುರಸ್ಕೃತೆ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ‘ಸುಕ್ರಜ್ಜಿ’ ಅಂತಾನೇ ಜನಪ್ರಿಯರಾಗಿದ್ದ ಇವರು ಸುಮಾರು 5,000ಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳನ್ನು ಕಂಠಪಾಠ ಮಾಡಿಕೊಂಡಿದ್ದಾರೆ. ಜಾನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮಗೌಡ ಅವರು ನೀಡಿರುವ ಕೊಡುಗೆಗಳು ಅವಿಸ್ಮರಣೀಯ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.