ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗಾವಹಿಸಿ: ಸಿ.ಸಿ ಪಾಟೀಲ

ವಿಜಯಪುರ 08: ಸರ್ಕಾರದ ನಿರ್ದೇಶನದಂತೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಕೃಷಿ ಚಟುವಟಿಕೆಗಳು ಮತ್ತು ಅಗತ್ಯ ವಸ್ತುಗಳಿಗೆ ಮುಕ್ತ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ  ಸಿ.ಸಿ ಪಾಟೀಲ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ ಅವರು ನಿಷೇಧಾಜ್ಞೆಯಿಂದ ಸಾರ್ವಜನಿಕರಿಗೆ ಮತ್ತು ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೊರೊನಾ ಸೋಂಕು ಪ್ರಭಾವಿತ ಜಿಲ್ಲೆ ಮತ್ತು ರಾಜ್ಯಗಳಿಂದ ಆಗಮಿಸುವವರ ಬಗ್ಗೆ ತೀವ್ರ ನಿಗಾ ಇಡಬೇಕು. ಅನಾವಶ್ಯಕವಾಗಿ ಓಡಾಡುತ್ತಿರುವ ವಾಹನ ಓಡಾಟಗಾರರ ಬಗ್ಗೆಯೂ ಗಮನ ನೀಡುವಂತೆ ತಿಳಿಸಿದ ಅವರು ಈವರೆಗೆ ಪಾಸಿಟಿವ್ ಪ್ರಕರಣಗಳು ಬರದ ರೀತಿಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಪಡಿತರ ಆಹಾರ ಧಾನ್ಯ ಸಾಮಾಜಿಕ ಅಂತರದೊಂದಿಗೆ ವಿತರಣೆಯಾಗಬೇಕು. ರೈತರು ಕೃಷಿ ಚಟುವಟಿಕೆಗಳನ್ನು ಮುಕ್ತವಾಗಿ ನಡೆಸಲು ಅವಕಾಶ ಕಲ್ಪಿಸಬೇಕು. ಸಾರ್ವಜನಿಕರಿಗೆ ಜೀವನಾವಶ್ಯಕ ವಸ್ತುಗಳನ್ನು ಪಡೆಯುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವಂತೆ ತಿಳಿ ಹೇಳಬೇಕು. ಅಗತ್ಯ ವಸ್ತುಗಳು ಸಮರ್ಪಕವಾಗಿ ಪೂರೈಕೆಯಾಗುವಂತೆ, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಸಾಗಾಣಿಕೆ ಹಾಗೂ ಮಾರಾಟಕ್ಕೆ ಸೂಕ್ತ ಕ್ರಮಕೈಗೊಳ್ಳಲು ಅವರು ಸಲಹೆ ನೀಡಿದರು.