ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಕ್ರಮವಹಿಸಿ: ದೀಪಕ ಮಡಿವಾಳರ

ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಕ್ರಮವಹಿಸಿ: ದೀಪಕ ಮಡಿವಾಳರ Taluk Panchayat General Assembly

ತಾಲೂಕು ಪಂಚಾಯತ ಸಾಮಾನ್ಯ ಸಭೆ 

ಹುಬ್ಬಳ್ಳಿ ಆ.16: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆಗಳು ಸೇರಿದಂತೆ ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ಸರಿಯಾದ ಯೋಜನೆಗಳಿಗೆ ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಕ್ರಮವಹಿಸಬೇಕಾಗುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳಾದ ದೀಪಕ ಮಡಿವಾಳರ ಹೇಳಿದರು.  

ಇಂದು ತಾಲೂಕು ಆಡಳಿತಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.  

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ ಸರಿಯಾದ ರೀತಿಯಲ್ಲಿ ನೀರು ಪೂರೈಕೆ ಆಗುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಅಲ್ಲದೇ ಕಲುಷಿತ ನೀರನ್ನು ಜನರಿಗೆ ಕುಡಿಯಲು ಒದಗಿಸಲಾಗುತ್ತಿದೆ ಎಂಬ ದೂರುಗಳು ಸಹ ಬಂದಿವೆ. ಆದಷ್ಟು ಬೇಗ ಈ ಸಮಸ್ಯೆಗಳನ್ನು ಪರಿಹರಿಸಿ, ಜನರಿಗೆ ಉತ್ತಮ ಶುದ್ಧ ಕುಡಿಯುವ ನೀರನ್ನು ಒದಗಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.  

ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಬಾಳೆ ಹಣ್ಣುಗಳು ಗುಣಮಟ್ಟದಾಗಿರುವುದಿಲ್ಲ ಎಂಬ ದೂರುಗಳು ಬಂದಿವೆ. ಹೀಗಾಗಿ ಮಕ್ಕಳಿಗೆ ವಿತರಿಸುವ ಬಾಳೆಹಣ್ಣುಗಳನ್ನು ಪರೀಕ್ಷಿಸಿ, ಬಳಿಕ ವಿತರಣೆ ಮಾಡಲು ಅಧಿಕಾರಿಗಳು ಮುಂದಾಗಬೇಕು. ಕೆಲವು ಮಕ್ಕಳು ಹಾಲು ಸೇವನೆ ಮಾಡಲು ಹಿಂದೇಟು ಹಾಕುತ್ತಿರುವ ಪ್ರಕರಣಗಳು ಕೇಳಿ ಬಂದಿವೆ. ಹಾಲು ಸೇವನೆ ಮಾಡುವಂತೆ ಮಕ್ಕಳ ಮನವೊಲಿಸಬೇಕು. ಶಾಲಾ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಬಿಸಿಯೂಟ ವಿತರಣೆ ಮಾಡಬೇಕು. ಶಾಲಾ ಮಕ್ಕಳಿಗೆ ಸರಿಯಾಗಿ ಸಮವಸ್ತ್ರ, ಶೂ ವಿತರಣೆ ಆಗುತ್ತಿರುವುದರ ಬಗ್ಗೆ ಗಮನ ಹರಿಸಬೇಕು. ಅಂಚಟಗೇರಿ, ಬುಡರಸಿಂಗಿ ಹಾಗೂ ಕುರಡಿಕೇರಿ ಗ್ರಾಮಗಳ ಶಾಲೆಗಳಿಗೆ ಶೀಟ್ ಅಳವಡಿಸಬೇಕಾಗಿದೆ. ಅಲ್ಲದೇ ಕುಸುಗಲ್ ಗ್ರಾಮದ ಶಾಲೆಗೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಬೇಕಿದೆ. ಕೋಳಿವಾಡ ಗ್ರಾಮದಲ್ಲಿರುವ ರಂಗ ಮಂದಿರಕ್ಕೆ ಶೀಟ್ ಹಾಗೂ ಪ್ಲೋರಿಂಗ್ ಮಾಡುವುದು ಅವಶ್ಯವಿದೆ. ಮಂಟೂರು ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕಾಗಿದೆ. ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆ ತರುವ ನಿಟ್ಟಿನಲ್ಲಿ ವಿನೂತನ ಪ್ರಯತ್ನಗಳನ್ನು ಮಾಡಬೇಕು ಎಂದು ಅವರು ಸೂಚಿಸಿದರು.  

ಕೋಳಿವಾಡ ಗ್ರಾಮದಲ್ಲಿರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಆರ್‌ಒ ಫಿಲ್ಟರ್ ಅಳವಡಿಸಬೇಕು. ಸ್ನಾನ ಗೃಹ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಎರಡು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನದ ಕೊರತೆಯಿದೆ. ಅಲ್ಲದೇ ಬಾಬುಜಗಜೀವನ ರಾಂ ಭವನ ಹಾಗೂ ಆಡಳಿತ ಭವನ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ ಸಲ್ಲಿಸಿರುವ ಅರ್ಜಿಗಳು ತ್ವರಿತವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ ಅವರು ಸಭೆಗೆ ತಿಳಿಸಿದರು.  

ತೋಟಗಾರಿಕೆ ಇಲಾಖೆಯಿಂದ ಕೈಗೊಳ್ಳಲಾಗುವ ಯೋಜನೆಗಳ ಬಗ್ಗೆ ಜನರಿಗೆ ತಿಳಿಯಪಡಿಸಬೇಕು. ಆ ನಿಟ್ಟಿನಲ್ಲಿ ಗ್ರಾಮ ಪಂಚಾಯತಗಳ ಸೂಚನಾ ಫಲಕದಲ್ಲಿ ವಿವಿಧ ಬೆಳೆಗಳ ಮಾಹಿತಿ ಫಲಕವನ್ನು ಅಳವಡಿಸುವುದು ಅವಶ್ಯಕವಿದೆ. ಈ ಕುರಿತು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಪ್ರಭುಲಿಂಗ ಗಡ್ಡದ ಅವರಿಗೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಅವರು ಸೂಚನೆ ನೀಡಿದರು.  

ಕೃಷಿ ಯೋಜನೆಗಳನ್ನು ಜನರಿಗೆ ತಲುಪಿಸಲು ಕ್ರಮವಹಿಸಬೇಕು. ಅಲ್ಲದೇ ರೈತರಿಗೆ ಸರ್ಕಾರದ ವಿವಿಧ ಯೋಜನೆಗಳ ತಿಳಿಯಪಡಿಸಬೇಕಿದೆ. ಕೃಷಿಹೊಂಡ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಹೆಸರು ಕಾಳು ಖರೀದಿ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ ಅವರಿಗೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಅವರು ಸೂಚಿಸಿದರು.  

ತಿರುಮಲಕೊಪ್ಪದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯವು ಉತ್ತಮ ಸ್ಥಿತಿಯಲ್ಲಿ ಇರುವುದಿಲ್ಲ. ಈ ಕುರಿತು ಅಧಿಕಾರಿಗಳು ಖುದ್ದು ಭೇಟಿ ನೀಡಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಗಳು ಆಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಪಶುಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ, ಆಹಾರ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ಪ್ರಗತಿ ವರದಿಯನ್ನು ಸಭೆಗೆ ತಿಳಿಸಿದರು.  

ಸಭೆಯಲ್ಲಿ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಕುರ್ತಕೋಟಿ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪುರ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರತ್ನಾ ಕ್ಯಾಸನೂರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಡಾ.ಸಂಗಮೇಶ ಬಂಗಾರಿಮಠ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರತೀಕ್ಷಾ, ವಲಯ ಅರಣ್ಯ ಅಧಿಕಾರಿ ಆರ್‌.ಎಸ್‌. ಉಪ್ಪಾರ, ಶಿವಾನಂದ ಮಾದರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯತಗಳ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.